ADVERTISEMENT

ತಾಯಿ-ಶಿಶು ಮರಣ ಪ್ರಮಾಣ ಕ್ಷೀಣ: ಸೆಲ್ವಕುಮಾರ್

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2011, 12:35 IST
Last Updated 13 ಅಕ್ಟೋಬರ್ 2011, 12:35 IST

ಮೈಸೂರು: `ರಾಜ್ಯದಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸುಧಾರಿಸಿದೆ~ ಎಂದು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ನಿರ್ದೇಶಕ ಎಸ್.ಸೆಲ್ವಕುಮಾರ್ ಇಲ್ಲಿ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ `ಆರೋಗ್ಯ ಶ್ರೇಣಿ~ ಶುಲ್ಕ ರಹಿತ ದೂರವಾಣಿ ವ್ಯವಸ್ಥೆಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. `ತಾಯಿ ಮತ್ತು ಶಿಶು ಮರಣ ಕಡಿಮೆ ಮಾಡುವ ಸಲುವಾಗಿ 2005 ರಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಕಾರ್ಯಕ್ರಮವನ್ನು ಆರಂಭಿಸಲಾಯಿತು.

ಸಮುದಾಯ ಬೇಡಿಕೆ ಇದ್ದಲ್ಲಿ ಮಾತ್ರ ಸಮಸ್ಯೆಯನ್ನು ಪರಿಹರಿಸಬಹುದು. ಆರೋಗ್ಯ ವ್ಯವಸ್ಥೆಯಲ್ಲಿ ಸಮುದಾಯ ಭಾಗವಹಿಸುವಿಕೆ ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸಲು ಸಮುದಾಯಾಧಾರಿತ ಕ್ರಿಯಾ ಸಮೀಕ್ಷೆ ಯೋಜನೆಯನ್ನು ಇದೀಗ ಪ್ರಾಯೋಗಿಕವಾಗಿ ಜಿಲ್ಲೆಯಲ್ಲಿ ಜಾರಿ ಮಾಡಲಾಗುತ್ತಿದೆ~ ಎಂದು ಹೇಳಿದರು.

`ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಭ್ಯ ಇರುವ ಸೇವಾ ಸೌಲಭ್ಯಗಳು, ಕೊರತೆಗಳು, ಸಮಸ್ಯೆಗಳ ಬಗ್ಗೆ ಅನಿಸಿಕೆಗಳನ್ನು ಆರೋಗ್ಯ ಶ್ರೇಣಿ ದೂರವಾಣಿ ಕರೆ ವ್ಯವಸ್ಥೆ ಮೂಲಕ ದಾಖಲಿಸಬಹುದಾಗಿದೆ. ಪ್ರಶ್ನೆಗಳಿಗೆ ನೀಡಿದ ಉತ್ತರಗಳು ಗಣಕೀಕೃತವಾಗಿ ಒಂದು ದತ್ತಾಂಶದಲ್ಲಿ ಸಂಗ್ರಹವಾಗುತ್ತದೆ.

ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ಆರೋಗ್ಯ ಶ್ರೇಣಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದು ಯಶಸ್ವಿಯಾದಲ್ಲಿ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು. ಗ್ರಾಮ ನೈರ್ಮಲ್ಯ ಕೇಂದ್ರಗಳು ಮತ್ತುವೈದ್ಯಾಧಿಕಾರಿಗಳು ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಹೇಳಿದರು.

ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥಾಪಕ ಅಧ್ಯಕ್ಷ ಡಾ.ಆರ್.ಬಾಲಸುಬ್ರಹ್ಮಣ್ಯಂ ಮಾತನಾಡಿ, `ಜಿಲ್ಲೆಯ 137 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮೊದಲ ಬಾರಿಗೆ ಆರೋಗ್ಯ ಶ್ರೇಣಿ ಯೋಜನೆಯನ್ನು ಪ್ರಾಯೋಗಿಕವಾಗಿ ಮಾಡಲಾಗುತ್ತಿದೆ.

ಶುಲ್ಕ ರಹಿತ ದೂರವಾಣಿ ಕರೆ ವ್ಯವಸ್ಥೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಮಾತ್ರ ಕರೆ ಮಾಡಿ ಕೇಂದ್ರಗಳ ಸಮಸ್ಯೆಗಳು, ಅಗತ್ಯದ ಬಗ್ಗೆ ದಾಖಲಿಸಬಹುದು~ ಎಂದು ಹೇಳಿದರು.

`ಸಮುದಾಯ ಆರೋಗ್ಯ ಕೇಂದ್ರಗಳ ಬಗ್ಗೆ ಸಂಗ್ರಹಿತವಾದ ಮಾಹಿತಿಯಿಂದ ಆರೋಗ್ಯ ಕೇಂದ್ರಗಳ ಶ್ರೇಣಿ ಪಟ್ಟಿಯನ್ನು ತಯಾರಿಸಿ ಅದನ್ನು ಸಮುದಾಯ, ಜನಪ್ರತಿನಿಧಿಗಳು ಮತ್ತು ಇಲಾಖೆ ಸಿಬ್ಬಂದಿಗಳಿಗೆ ತಿಳಿಸಲಾಗುತ್ತದೆ.

ಇದರಿಂದ ಸಮುದಾಯದ ಪ್ರತಿನಿಧಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಸೇವಾ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ಆರೋಗ್ಯ ಕೇಂದ್ರಗಳ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ~ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಂ.ಮಾಲೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಬಸವರಾಜು ಪ್ರಾಸ್ತಾವಿಕ ಭಾಷಣ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.