ADVERTISEMENT

ನೀರಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2012, 8:45 IST
Last Updated 21 ಏಪ್ರಿಲ್ 2012, 8:45 IST

ಮೈಸೂರು: ಕುಡಿಯುವ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ರಾಜರಾಜೇಶ್ವರಿ ನಗರದ ನಾಗರಿಕರು ಶುಕ್ರವಾರ ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ಮಾಡಿದರು.
ಈ ಬಡಾವಣೆಯು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವ್ಯಾಪ್ತಿಗೆ ಒಳಪಟ್ಟಿದೆ.
 
ಬೇಸಿಗೆಯಲ್ಲಿ ಕುಡಿಯಲು ನೀರಿಗೆ ತತ್ವಾರ ಉಂಟಾಗಿದ್ದು, ಹನಿ ನೀರಿಗೂ ಪರದಾಡುವಂತಾಗಿದೆ. ಈ ಬಗ್ಗೆ ಪಾಲಿಕೆ ಮೊರೆ ಹೋದರೆ, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಮುಡಾ ವ್ಯಾಪ್ತಿಗೆ ಬರುತ್ತದೆ ಎಂದು ಅಧಿಕಾರಿಗಳು ಸಬೂಬು ಹೇಳುತ್ತಾರೆ. ಆದರೆ, ಮುಡಾ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಇಬ್ಬರ ಮಧ್ಯೆ ನಾವು ಬವಣೆ ಪಡುವಂತಾಗಿದೆ ಎಂದು ಪ್ರತಿಭಟನಾನಿರತ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ರಾಜರಾಜೇಶ್ವರಿ ನಗರದ ರಿಂಗ್ ರಸ್ತೆಗೆ ಹೊಂದಿಕೊಂಡಂತಿರುವ ಮುಖ್ಯ ರಸ್ತೆಯಲ್ಲಿ ವಾಹನಗಳನ್ನು ತಡೆಗಟ್ಟಿ ಪಾಲಿಕೆ, ಮುಡಾ ವಿರುದ್ಧ ಘೋಷಣೆ ಕೂಗಿದರು. ಇದರಿಂದಾಗಿ ಮುಕ್ಕಾಲು ಗಂಟೆ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.

ಪ್ರತಿಭಟನೆಯಿಂದಾಗಿ ರಸ್ತೆಯ ನಾಲ್ಕೂ ಬದಿಗಳಲ್ಲಿ ಲಾರಿ, ಬಸ್ಸು, ದ್ವಿಚಕ್ರ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಿದ ಮೇಲೆ ಪ್ರತಿಭಟನೆ ಹಿಂಪಡೆಯಲಾಯಿತು.
`2-3 ದಿನಗಳಲ್ಲಿ ನೀರು ಸರಬರಾಜು ಮಾಡದಿದ್ದರೆ ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುವುದು~ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಹದೇವು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.