ADVERTISEMENT

ಪರಿಶಿಷ್ಟ ಪಂಗಡದವರ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2012, 10:05 IST
Last Updated 11 ಫೆಬ್ರುವರಿ 2012, 10:05 IST

ಮೈಸೂರು:ರಾಜ್ಯ ಸರ್ಕಾರ ಈ ಬಾರಿ ಬಜೆಟ್‌ನಲ್ಲಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂಪಾಯಿ ಮೀಸಲಿಡಬೇಕು ಎಂದು ಕರ್ನಾಟಕ ರಾಜ್ಯ ನಾಯಕರ ಯುವಸೇನೆ ರಾಜ್ಯ ಘಟಕದ ಅಧ್ಯಕ್ಷ ದೇವರಾಜ್.ಟಿ.ಕಾಟೂರ್ ಒತ್ತಾಯಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರವು ಪರಿಶಿಷ್ಟ ಪಂಗಡದವರಿಗೆ ನೀಡುತ್ತಿದ್ದ ನೇರ ಸಾಲ ಸೌಲಭ್ಯವನ್ನು ಮತ್ತೆ ಕಲ್ಪಿಸಬೇಕು. ಸ್ವಯಂ ಭೂ ಒಡೆತನ ಯೋಜನೆಯಡಿ ಎಕರೆಗೆ ಈಗ ನೀಡುತ್ತಿರುವ ರೂ. 2.5 ಲಕ್ಷ ಸಹಾಯಧನವನ್ನು ರೂ. 5 ಲಕ್ಷಕ್ಕೆ ಹೆಚ್ಚಿಸಬೇಕು. ಎರಡು ಎಕರೆಗಿಂತ ಕಡಿಮೆ ಜಮೀನು ಇರುವವರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಮಂಜೂರು ಮಾಡಬೇಕು ಎಂದು ಕೋರಿದರು.

ಪ್ರಸ್ತುತ ಆರು ಜಿಲ್ಲೆಗಳಲ್ಲಿ ಮಾತ್ರ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಕಚೇರಿಗಳು ಇವೆ. ಉಳಿದ ಎಲ್ಲ ಜಿಲ್ಲೆಗಳಲ್ಲೂ ಈ ಕಚೇರಿಗಳನ್ನು ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಪಂಗಡದ ಮುಖಂಡರೊಂದಿಗೆ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಸದಾನಂದಗೌಡ ಅವರನ್ನು ಭೇಟಿ ಮಾಡಿ ಈ ಬಾರಿ ಬಜೆಟ್‌ನಲ್ಲಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಹೆಚ್ಚು ಅನುದಾನ ಮೀಸಲಿಡಲು ಮನವಿ ಸಲ್ಲಿಸುವುದಾಗಿ ಅವರು ತಿಳಿಸಿದರು.

ನಾಯಕರ ಯುವ ಸೇನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಕಡಕೊಳೆ ಕುಮಾರಸ್ವಾಮಿ, ಮಾರ್ಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಣ್ಣಪ್ಪ, ಎಚ್.ಡಿ.ಕೋಟೆ ತಾಲ್ಲೂಕು ಅಧ್ಯಕ್ಷ ಟಿ.ಎಲ್.ಸ್ವಾಮಿ  ಸುದ್ದಿಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.