ADVERTISEMENT

ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಒತ್ತಾಯ

ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಜೂನ್ 2018, 5:06 IST
Last Updated 11 ಜೂನ್ 2018, 5:06 IST

ಮೈಸೂರು: ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಮಾಡುವ ಜತೆಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ನಂಜನಗೂಡು ರಸ್ತೆಯ ಆರ್‌ ಎಂಸಿ ಸಮೀಪ ಸೇರಿದ ರೈತರು ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದರು. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಮಾತನಾಡಿ, ‘ಜೂನ್‌ 1ರಿಂದ 10ರ ವರೆಗೆ ರಾಷ್ಟ್ರೀಯ ಕಿಸಾನ್‌ ಮಹಾ ಸಂಘದ ಸಹಯೋಗದಲ್ಲಿ ಭಾರತ ಬಂದ್‌ ಹೋರಾಟ ನಡೆಸಲಾಗುತ್ತಿದೆ. ಉತ್ತರ ಪ್ರದೇಶ, ಪಂಜಾಬ್, ಹರಿಯಾಣದಲ್ಲಿ 156 ರೈತ ಸಂಘಟನೆಗಳ ಆಶ್ರಯದಲ್ಲಿ ‍ಪ್ರತಿಭಟನೆಗಳು ನಡೆಯಲಿವೆ. ಈ ಹೋರಾಟಕ್ಕೆ ಬೆಂಬಲಿಸಿ ರೈತರು ವಿವಿಧ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ’ ಎಂದು ಹೇಳಿದರು.

ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಬೇಕು. ನಗರ ಪ್ರದೇಶದ ಜನರಿಗೆ ಅರಿವು ಮೂಡಿಸುವ ಸಲುವಾಗಿ ರೈತರು ನಗರ ಪ್ರದೇಶಗಳಲ್ಲಿ ರಸ್ತೆ ತಡೆ ಕಾರ್ಯಕ್ರಮಗಳನ್ನು ನಡೆಸಬೇಕು. ನಗರ ಪ್ರದೇಶಗಳಿಗೆ ಹಾಲು, ಹಣ್ಣು, ತರಕಾರಿ ಸೇರಿದಂತೆ ಕೃಷಿ ಉತ್ಪನ್ನಗಳನ್ನು ಸರಬರಾಜು ಮಾಡದೆ ಗಂಭೀರತೆ ಮನವರಿಕೆ ಮಾಡಿಸುವ ಪ್ರಯತ್ನ ನಡೆಯಲಿದೆ ಎಂದು ಅವರು
ಹೇಳಿದರು.

ADVERTISEMENT

ಕಬ್ಬು ಬೆಳೆಗಾರರ ಸಂಘದ ರಾಜ್ಯ ಉಪಾಧ್ಯಕ್ಷ ಕೂಡನಹಳ್ಳಿ ರಾಜಣ್ಣ, ಜಿಲ್ಲಾಧ್ಯಕ್ಷ ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್, ಮುಖಂಡರಾದ ಹಾಡ್ಯ ರವಿ, ಕೃಷ್ಣೇಗೌಡ ವರಕೋಡು, ಹಂಬ್ಲೆ ಮಂಜುನಾಥ್, ಕುರುಬೂರು ಸಿದ್ದೇಶ, ಪಿ.ರಾಜು, ಎಚ್.ರಂಗರಾಜು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.