ADVERTISEMENT

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರ: ಆರೋಪ

​ಪ್ರಜಾವಾಣಿ ವಾರ್ತೆ
Published 2 ಜುಲೈ 2012, 10:15 IST
Last Updated 2 ಜುಲೈ 2012, 10:15 IST

ಮೈಸೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಶಿಕ್ಷಕರ ಪರವಾದ ಸಚಿವರಿಲ್ಲ. ಹೀಗಾಗಿ ಕಳೆದ ನಾಲ್ಕು ವರ್ಷಗಳಿಂದ ಅವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಆರೋಪಿಸಿದರು.

ನಗರದ ಹೋಟೆಲ್ ಗೋವರ್ದನದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಸರ್ಕಾರಿ ಪ್ರಾಥ ಮಿಕ ಶಾಲೆಗಳ ತರಬೇತಿ ಹೊಂದದ ಪರಿಶಿಷ್ಟ ಜಾತಿ, ಪಂಗಡದ  ಶಿಕ್ಷಕರ ಸಂಘ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಶಿಕ್ಷಣ ಇಲಾಖೆಯಲ್ಲಿ ಹತ್ತು ಹಲವು ಸಮಸ್ಯೆ ಗಳಿವೆ. ವೇತನ ತಾರತಮ್ಯ ಬಗೆಹರಿಸುವುದಾಗಿ ಸರ್ಕಾರ ನೀಡಿದ್ದ ಭರವಸೆ ಹುಸಿಯಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಕ್ಷಕರಿಗೆ ಸ್ಪಂದಿಸುತ್ತಿಲ್ಲ. ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಆಯ್ಕೆಯಾದರೆ ಮಾತ್ರ ಕೆಲಸ ಮಾಡುವುದಾಗಿ ಹೇಳಿದ್ದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಯಾವ ಸರ್ಕಾರವೂ ಇಂಥ ಉದ್ಧಟತನದ ಹೇಳಿಕೆ ನೀಡಿರಲಿಲ್ಲ. ಅವರಿಗೆ ಆರ್‌ಎಸ್‌ಎಸ್ ಹಿನ್ನೆಲೆಯ ಶಿಕ್ಷಕ ಪ್ರತಿನಿಧಿಗಳು ಬೇಕಾಗಿದ್ದಾರೆಯೇ ಹೊರತು ಕೆಲಸ ಮಾಡುವವರು ಅಲ್ಲ ಎಂದು ಹರಿಹಾಯ್ದರು.

ಸಾಮಾಜಿಕ ನ್ಯಾಯಕ್ಕೆ ಒತ್ತುಕೊಟ್ಟು ಕೆಲಸ ಮಾಡದಿದ್ದರೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ. ಇದರಿಂದ ವಿದ್ಯಾರ್ಥಿ ಸಮೂಹ ಬಲಿಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವೇತನ ತಾರತಮ್ಯ ಬಗೆಹರಿಸುವಂತೆ 1800 ಮಂದಿ ತರಬೇತಿ ಹೊಂದದ ಶಿಕ್ಷಕರು ಕಳೆದ ಮೂರು ದಶಕಗಳಿಂದ ಮಾಡುತ್ತಿರುವ ಹೋರಾಟ ಅರಣ್ಯ ರೋದನವಾಗಿದೆ. ಅವರ ಬೇಡಿಕೆಗಳನ್ನು ಈಡೇರಿಸು ವಲ್ಲಿ ಸರ್ಕಾರ ವಿಫಲವಾಗಿದೆ. ಆರ್ಥಿಕ ಇಲಾಖೆಯ ಕಾರ್ಯದರ್ಶಿ ಅನಿಲಕುಮಾರ್ ಝ ಅವರೊಂದಿಗೆ ಮಾತನಾಡಿದ್ದೇನೆ. ಕೆಲವೇ ದಿನಗಳಲ್ಲಿ ಈ ಸಮಸ್ಯೆ ಬಗೆಹರಿಯುತ್ತದೆ ಎಂದು ಆಶ್ವಾಸನೆ ನೀಡಿದರು.

ಸಂಘದ ಅಧ್ಯಕ್ಷ ಸಗಣಯ್ಯ, ಕಾರ್ಯದರ್ಶಿ ಎಚ್.ರಾಜು, ಕಾನೂನು ಸಲಹೆಗಾರ ಸುಂದರ್, ಖಜಾಂಚಿ ಜವರಯ್ಯ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.