ADVERTISEMENT

ಸದಾಶಿವ ಆಯೋಗ ವರದಿ ತಿರಸ್ಕರಿಸಿ

​ಪ್ರಜಾವಾಣಿ ವಾರ್ತೆ
Published 30 ಜನವರಿ 2018, 6:56 IST
Last Updated 30 ಜನವರಿ 2018, 6:56 IST
ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇಗುಲದ ಎದುರು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು
ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇಗುಲದ ಎದುರು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು   

ಮೈಸೂರು: ಒಳಮೀಸಲಾತಿ ಕುರಿತು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ನೀಡಿದ ವರದಿಯನ್ನು ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕೋಟೆ ಆಂಜನೇಯಸ್ವಾಮಿ ದೇಗುಲದ ಎದುರು ಜಮಾಯಿಸಿದ ಪ್ರತಿಭಟನಾಕಾರರು ವರದಿ ಅವೈಜ್ಞಾನಿಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ಕಾಡಾ’ ಕಟ್ಟಡದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಕಚೇರಿಯವರೆಗೂ ಮೆರವಣಿಗೆ ನಡೆಸಿದರು.

‘ದಲಿತರ ಹಿತಾಸಕ್ತಿಗೆ ವಿರುದ್ಧವಾಗಿ ಆಯೋಗ ನಡೆದುಕೊಂಡಿದೆ. ವರದಿಯು ಸುಳ್ಳು, ಅವಾಸ್ತವಿಕ ಸಂಗತಿಗಳನ್ನು ಒಳಗೊಂಡಿದೆ. ದಲಿತ ಸಮುದಾಯದ ಒಳಗೆ ಪರಸ್ಪರ ದ್ವೇಷ, ಅನುಮಾನ ಹಾಗೂ ತಪ್ಪು ಕಲ್ಪನೆಗಳನ್ನು ಹುಟ್ಟುಹಾಕಿದೆ. ಸಾರ್ವಜನಿಕ ಚರ್ಚೆಗೆ ಆಸ್ಪದ ನೀಡದ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ’ ಎಂದು ಆರೋಪಿಸಿದರು.

ADVERTISEMENT

‘ಈ ವರದಿಯನ್ನು ಯಾರೊಬ್ಬರೂ ಸಮಗ್ರವಾಗಿ ಅಧ್ಯಯನ ಮಾಡಿಲ್ಲ. ಇದನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಲು ಮುಂದಾಗಿದ್ದಾರೆ. ಭೋವಿ, ಲಂಬಾಣಿ, ಛಲವಾದಿ, ಕೊರಚ, ಕೊರಮ ಸೇರಿ ಇತರ ಜಾತಿಗಳ ವಿರುದ್ಧ ಮಾದಿಗರನ್ನು ಎತ್ತಿಕಟ್ಟಲಾಗಿದೆ. ಇದು ತುಂಬಾ ಅಪಾಯಕಾರಿ ಬೆಳವಣಿಗೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಜಂಟಿ ಸಭೆ ಕರೆಯುವುದಾಗಿ ಆಶ್ವಾಸನೆ ನೀಡಿದ್ದ ಸಚಿವ ಕೆ.ಜೆ.ಜಾರ್ಜ್ ಮಾತಿಗೆ ತಪ್ಪಿದ್ದಾರೆ. ಎಲ್ಲರ ಹಿತ ಕಾಪಾಡಬೇಕಾಗಿರುವ ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಪಕ್ಷಪಾತ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ. ದಲಿತರ ಒಗ್ಗಟ್ಟನ್ನು ಮುರಿಯಲು ಮನುವಾದಿಗಳು ಷಡ್ಯಂತ್ರ ಮಾಡುತ್ತಿದ್ದಾರೆ’ ಎಂದು ದೂರಿದರು.

‘ಒಕ್ಕೂಟದ ಪದಾಧಿಕಾರಿಗಳನ್ನು ಮುಖ್ಯಮಂತ್ರಿ ತಕ್ಷಣ ಸಭೆ ಕರೆಯಬೇಕು. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳಿಗೂ ವರದಿ ಪ್ರತಿ ನೀಡಿ ಅಹವಾಲು, ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಬಾಧಿತ ಸಮುದಾಯಗಳಿಗೆ ಧಕ್ಕೆ ಆಗದಂತೆ ಸಮಸ್ಯೆ ಇತ್ಯರ್ಥಪಡಿಸಬೇಕು’ ಎಂದು ಒತ್ತಾಯಿಸಿದರು.

ಶಿವಯೋಗಿ ಸಿದ್ಧರಾಮೇಶ್ವರ ಭೋವಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ನಾಗರಾಜು, ಬಂಜಾರ ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸದಾನಂದ, ಕೊರಮ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ, ಮೋಹನರಾಜ್‌ ಕುಳುವ, ಬಸವರಾಜ್‌, ಟಿ.ಕೆ,ಗೋಪಾಲ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.