ADVERTISEMENT

15ರಂದು ಪ್ರಜಾಪ್ರಭುತ್ವ ದಿನ, 60 ಕಿ.ಮೀ ಮಾನವ ಸರಪಳಿ

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2024, 14:18 IST
Last Updated 5 ಸೆಪ್ಟೆಂಬರ್ 2024, 14:18 IST
ಜಿ. ಲಕ್ಷ್ಮೀಕಾಂತ ರೆಡ್ಡಿ
ಜಿ. ಲಕ್ಷ್ಮೀಕಾಂತ ರೆಡ್ಡಿ   

ಮೈಸೂರು: ‘ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಸೆ.15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಅಂದು ಜಿಲ್ಲೆಯಾದ್ಯಂತ 60 ಕಿ.ಮೀ. ಮಾನವ ಸರಪಳಿ ರಚನೆಗೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಜಿಲ್ಲೆಯ ಪ್ರತಿ ಅಧಿಕಾರಿ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ‘ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ’ (ಸಮಾನತೆ, ಭ್ರಾತೃತ್ವ ಮತ್ತು ಸ್ವಾತಂತ್ರ್ಯ) ಎಂಬ ಧೈಯವಾಕ್ಯದೊಂದಿಗೆ ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ’ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪ್ರಜಾಪ್ರಭುತ್ವ ಎಂಬುದು ಎಲ್ಲರಿಗೂ ಸಂಬಂಧಿಸಿದ್ದಾಗಿದೆ. ಇಂಥ ಕಾರ್ಯಕ್ರಮಕ್ಕೆ ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಪಾಲ್ಗೊಂಡಾಗ ಮಾತ್ರವೇ ನಿರೀಕ್ಷಿಸಿದ ಪ್ರತಿಫಲ ದೊರೆತು, ಯಶಸ್ವಿಯಾಗುತ್ತದೆ. ಹಾಗಾಗಿ ಸರಪಳಿಯು ಏರ್ಪಡುವ ಸ್ಥಳಗಳಲ್ಲಿ ಜನರು ನಮ್ಮೊಂದಿಗೆ ಸಹಕರಿಸಬೇಕು’ ಎಂದು ಕೋರಿದರು.

ADVERTISEMENT

‘ಕಾರ್ಯಕ್ರಮವು ಸೆ.15ರಂದು ಬೆಳಿಗ್ಗೆ 8.30ರಿಂದ 9.30ರವರೆಗೆ ನಡೆಯಲಿದೆ. ಸಿದ್ದಲಿಂಗಪುರದಿಂದ ಆರಂಭಗೊಳ್ಳುತ್ತದೆ. ಬಳಿಕ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಎದುರಿನ ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಂದುವರಿಯುತ್ತದೆ’ ಎಂದು ತಿಳಿಸಿದರು.

‘ಸರಪಳಿಗೆ 60ಸಾವಿರಕ್ಕೂ ಹೆಚ್ಚಿನ ಜನರ ಅವಶ್ಯಕತೆ ಇದೆ. ಇದಕ್ಕೆ ಅಧಿಕಾರಿಗಳು, ಶಾಲಾ -ಕಾಲೇಜು ವಿದ್ಯಾರ್ಥಿಗಳು, ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಪೌರಕಾರ್ಮಿಕರು, ಗ್ರಾಮ ಪಂಚಾಯಿತಿಯ ಸದಸ್ಯರ ಜೊತೆ ಸಾರ್ವಜನಿಕರೂ ಪಾಲ್ಗೊಳ್ಳಬೇಕು. ವಿದ್ಯಾಸಂಸ್ಥೆಗಳು, ಸಂಘ ಸಂಸ್ಥೆಗಳು ಹಾಗೂ ಇಲಾಖೆಗಳು ಸಹಕರಿಸಬೇಕು’ ಎಂದರು.

‘ಇದು ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಪ್ರತಿಯೊಬ್ಬರೂ ಗಂಭೀರವಾಗಿ ಪರಿಗಣಿಸಬೇಕು. ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ ಮಾತನಾಡಿ, ‘ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ 60 ಕಿ.ಮೀ. ಮಾನವ ಸರಪಳಿ ನಿರ್ಮಾಣಕ್ಕೆ ಜಿಲ್ಲೆಯಲ್ಲಿನ ನಿರ್ದಿಷ್ಟ ಅಂತರಕ್ಕೆ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ಅಧಿಕಾರಿಗಳು ಜನರನ್ನು ಸೇರಿಸಿ ಸರಪಳಿ ನಿರ್ಮಿಸಿ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ತೊಂದರೆ ಎದುರಾಗದಂತೆ ನೋಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ಮುಡಾ ಆಯುಕ್ತ ರಘುನಂದನ್ ಎ.ಎನ್., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.