ADVERTISEMENT

2 ವರ್ಷಗಳಲ್ಲಿ 9.24 ಲಕ್ಷ ಮನೆ ನಿರ್ಮಾಣ

ಪ್ರತಿಯೊಬ್ಬ ಬಡವನಿಗೂ ಸೂರು ಕಲ್ಪಿಸುವುದು ಉದ್ದೇಶ: ವಸತಿ ಸಚಿವ ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 4:33 IST
Last Updated 14 ನವೆಂಬರ್ 2020, 4:33 IST
ಸೋಮಣ್ಣ
ಸೋಮಣ್ಣ   

ಮೈಸೂರು: ‘ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಮುಂದಿನ ಎರಡು ವರ್ಷಗಳಲ್ಲಿ 9.24 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಇಟ್ಟುಕೊಂಡಿದ್ದೇವೆ’ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

‘ರಾಜ್ಯದಲ್ಲಿ ಪ್ರತಿಯೊಬ್ಬ ಬಡವನಿಗೂ ಸೂರು ಕಲ್ಪಿಸಬೇಕು ಎಂಬುದು ನಮ್ಮ ಉದ್ದೇಶ. ವಸತಿ ಇಲಾಖೆಯು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ’ ಎಂದು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ನಮ್ಮ ಸರ್ಕಾರ ಬಂದ ಮೇಲೆ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ 1.17 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಈ ಯೋಜನೆ ಗೊಂದಲದ ಗೂಡಾಗಿತ್ತು. ಇದೀಗ ಎಲ್ಲವನ್ನೂ ಸರಿಪಡಿ ಸಲಾಗಿದೆ’ ಎಂದರು.

ADVERTISEMENT

‘ಹಳ್ಳಿಗಳ ಲ್ಲಿರುವ ಬಡವರು, ನಿರ್ಗತಿಕರಿಗೆ ಸೂರು ಕಲ್ಪಿಸಿಕೊಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 6,010 ಎಕರೆ ಜಮೀನನ್ನು ಗುರಿತಿಸಿ ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ಕೊಟ್ಟಿದ್ದೇವೆ. 1.84 ಲಕ್ಷ ನಿವೇಶನಗಳನ್ನು ಮಾಡಲು ಉದ್ದೇಶಿಸಲಾಗಿದೆ. ಮೂಲಸೌಕರ್ಯ ಒದಗಿಸಲು ಮೊದಲ ಹಂತದಲ್ಲಿ ಮುಖ್ಯಮಂತ್ರಿ ಅವರು ₹ 200 ಕೋಟಿ ಬಿಡುಗಡೆ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.

ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 83 ಸಾವಿರ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಅದರಲ್ಲಿ 25 ಸಾವಿರ ಮನೆಗಳ ನಿರ್ಮಾಣ ಪೂರ್ಣಗೊಂಡಿದ್ದು, ಫಲಾನುಭವಿಗಳಿಗೆ ಹಂಚಲಾಗುತ್ತದೆ. ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ 7 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಿ ನೆಮ್ಮದಿಯಿಂದ ಜೀವಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಅವರು ನುಡಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ನೆರೆ ಹಾವಳಿಯಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು ಮತ್ತು ದುರಸ್ತಿಗೆ ₹ 1,710 ಕೋಟಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡಲು ಹಣದ ಕೊರತೆಯಿಲ್ಲ ಎಂದು ಅವರು ಹೇಳಿದರು.

ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್‌.ಎ.ರಾಮದಾಸ್‌, ಎಲ್‌.ನಾಗೇಂದ್ರ, ಜಿ.ಟಿ.ದೇವೇಗೌಡ, ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಅರಗ ಜ್ಞಾನೇಂದ್ರ, ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.