ಪ್ರಾತಿನಿಧಿಕ ಚಿತ್ರ
ಮೈಸೂರು: ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸದಸ್ಯರು ಕುವೆಂಪು ನಗರದ ಕಾರ್ಮಿಕ ಕಚೇರಿ ಎದುರು ಗುರುವಾರ ಪ್ರತಿಭಟಿಸಿದರು.
‘ರಾಜ್ಯ ಸರ್ಕಾರವು ಕಾರ್ಪೊರೇಟ್ ಬಂಡವಾಳಶಾಹಿ ಪರವಾಗಿ ನಿಯಮಗಳನ್ನು ಬದಲಾಯಿಸುತ್ತಿರುವುದು ಅಪಾಯಕಾರಿ. ಕೆಲಸದ ಅವಧಿಯನ್ನು 12 ಗಂಟೆಗೆ ಹೆಚ್ಚಿಸಲು ಮುಂದಾಗಿರುವುದು ಕಾರ್ಮಿಕ ವಿರೋಧಿ ನಡೆ. ಇದರಿಂದ ಕಾರ್ಮಿಕರ ಮೇಲಿನ ಒತ್ತಡ ಹೆಚ್ಚುತ್ತದೆ’ ಎಂದರು.
‘ಅಪಾಯಕಾರಿ ಕೆಲಸಗಳಲ್ಲಿ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಲು ಅನುಕೂಲವಾಗುವ ರೀತಿಯ ಬದಲಾವಣೆ ತರಲು ಸರ್ಕಾರ ನಿರ್ಧರಿಸಿರುವುದು ಆತಂಕಕಾರಿ ಬೆಳವಣಿಗೆ. ಇದನ್ನು ಕಾರ್ಮಿಕ ಸಂಘಟನೆಗಳು ಖಂಡಿಸುತ್ತಿದ್ದು, ಕಾರ್ಮಿಕರ ಪರವಾಗಿ ನಿರ್ಧಾರ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
‘ಕಾರ್ಪೊರೇಟ್ ವ್ಯವಸ್ಥೆಯಲ್ಲಿ ಕಾರ್ಮಿಕರನ್ನು ಕಡೆಗಣಿಸಲಾಗುತ್ತಿದೆ. ರಾಜ್ಯದಲ್ಲಿ ಈ ವ್ಯವಸ್ಥೆ ಬಂದರೆ, ಕಾರ್ಮಿಕ ಮತ್ತಷ್ಟು ಸಂಕಷ್ಟ ಎದುರಿಸಬೇಕಾಗುತ್ತದೆ. ಸರ್ಕಾರವು ತನ್ನ ನಿರ್ಧಾರದ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು. ಬೇಡಿಕೆ ಈಡೇರದಿದ್ದರೆ ರಾಜ್ಯದಾದ್ಯಂತ ಹೋರಾಟ ಸಂಘಟಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯ ಬಳಿಕ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ಬಾಲಾಜಿರಾವ್, ಜಿ.ಜಯರಾಂ, ಮಹದೇವ, ರಾಘವೇಂದ್ರ, ಸುಬ್ರಹ್ಮಣ್ಯ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.