ADVERTISEMENT

ಮೈಸೂರು: ಆಶಾ ಕಾರ್ಯಕರ್ತೆಯರ ಆಕ್ರೋಶ

ಅನುದಾನರಹಿತ ಶಾಲಾ, ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 16:20 IST
Last Updated 30 ಜೂನ್ 2020, 16:20 IST
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು   

ಮೈಸೂರು: ₹ 12 ಸಾವಿರ ಗೌರವಧನ ಖಾತ್ರಿಪಡಿಸಬೇಕು, ಅಗತ್ಯವಿರುವಷ್ಟು ಆರೋಗ್ಯ ರಕ್ಷಣಾ ಸಾಮಗ್ರಿಗಳನ್ನು ನೀಡಬೇಕು ಎಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಸೇರಿದ ಪ್ರತಿಭಟನಾಕಾರರು ಬೇಡಿಕೆಗಳು ಈಡೇರದಿದ್ದರೆ ಜುಲೈ 10ರಿಂದ ಸೇವೆಯನ್ನು ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದರು.

ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲಿ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಯಾವುದೇ ರಕ್ಷಣಾ ಸಾಮಗ್ರಿ ಇಲ್ಲದೇ ಅವರು ಪ್ರತಿ ಮನೆಗೆ ಭೇಟಿ ನೀಡುತ್ತಿದ್ದಾರೆ. ಇವರಿಗೆ ಸೋಂಕು ತಗುಲಿದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ADVERTISEMENT

ಎಲ್ಲ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ನಡೆಸಬೇಕು. ಕೊರೊನಾ ಸೋಂಕಿತರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು. ಚಿಕಿತ್ಸೆಯ ಅವಧಿಯಲ್ಲಿ ಗೌರವಧನ ನೀಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕೋಮಲಾ, ಹೋರಾಟಗಾರರಾದ ಸೀಮಾ, ಸಂಧ್ಯಾ, ಶುಭಮಂಗಳಾ ಹಾಗೂ ಇತರರು ಇದ್ದರು.

ಪೌರಕಾರ್ಮಿಕರ ಹುದ್ದೆಗೆ ಸವರ್ಣಿಯರ ನೇಮಕ– ಆಕ್ರೋಶ
ಮೈಸೂರು:
ತಿ.ನರಸೀಪುರ ಪುರಸಭೆಯಲ್ಲಿ ಕಾಯಂ ಪೌರಕಾರ್ಮಿಕರ ಹುದ್ದೆಗೆ ಸವರ್ಣೀಯರು ನೇಮಕಗೊಂಡಿದ್ದಾರೆ. ಇವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ಹಲವು ಪೌರಕಾರ್ಮಿಕರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ದಲಿತ ಸಂಘರ್ಷ ಸಮಿತಿ (ಪುನರ್‌ ಅವಲೋಕನ) ಹಾಗೂ ಪೌರಕಾರ್ಮಿಕ ಅಸಂಘಟಿತ ಕಾರ್ಮಿಕ ವಿಭಾಗದ ನೇತೃತ್ವದಲ್ಲಿ ಸೇರಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ನೇಮಕಗೊಂಡಿರುವವರು ಕೆಲಸ ಮಾಡುತ್ತಿಲ್ಲ ಎಂದು ದೂರಿದ ಅವರು ಪುರಸಭೆಯ ಮುಖ್ಯಾಧಿಕಾರಿ ಹಲವು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.‌‌

ಕೂಡಲೇ ಈ ಎಲ್ಲ ವಿಷಯಗಳ ಕುರಿತು ತನಿಖೆ ನಡೆಸಬೇಕು. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಕಂಡು ಬಂದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.‌

ಸಂಘಟನೆಯ ರಾಜ್ಯ ಘಟಕದ ಸಂಚಾಲಕ ಹರಿಹರ ಆನಂದಸ್ವಾಮಿ, ಮುಖಂಡರಾದ ಅಶೋಕಪುರಂ ಪೈಲ್ವಾನ್ ಕೃಷ್ಣ, ಎಸ್.ನಾಗರಾಜು, ಡಿ.ಎನ್.ಬಾಬು, ಆರ್.ಚಕ್ರಪಾಣಿ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.