ADVERTISEMENT

ಮೈಸೂರು | ಎಂಎಸ್‌ಪಿ ಖಾತರಿ ಕಾನೂನು, ಸಾಲ ಮನ್ನಾ: ಕಬ್ಬು ಬೆಳೆಗಾರರ ಸಂಘ ಒತ್ತಾಯ

​ಪ್ರಜಾವಾಣಿ ವಾರ್ತೆ
Published 19 ಜನವರಿ 2026, 4:41 IST
Last Updated 19 ಜನವರಿ 2026, 4:41 IST
ಅತ್ತಹಳ್ಳಿ ದೇವರಾಜ್
ಅತ್ತಹಳ್ಳಿ ದೇವರಾಜ್   

ಮೈಸೂರು: ‘ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನು ಜಾರಿಗೊಳಿಸಬೇಕು ಹಾಗೂ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು’ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಒತ್ತಾಯಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಂಡಿಸಲಿರುವ 2026–27ನೇ ಸಾಲಿನ ಬಜೆಟ್‌ನಲ್ಲಿ ರೈತರ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

‘ಕೆರೆ–ಕಟ್ಟೆಗಳ ಒತ್ತುವರಿ ತೆರವುಗೊಳಿಸಿ, ಹೂಳು ತೆಗೆಸಬೇಕು. ಆ ಮಣ್ಣನ್ನು ರೈತರ ಜಮೀನುಗಳಿಗೆ ಹಾಕಿಸಿ ಫಲವತ್ತತೆ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯ ಯೋಜನೆ ರೂಪಿಸಬೇಕು. ಕಬ್ಬಿಗೆ ಎಫ್‌ಆರ್‌ಪಿಯನ್ನು ರೈತರ ಹೊಲದಲ್ಲಿನ ದರ ಎಂದು ನಿಗದಿಪಡಿಸಿಸುವ ಮಾನದಂಡ ಜಾರಿಗೆ ತರಬೇಕು. ಸಕ್ಕರೆ ಇಳುವರಿ 9.5ಕ್ಕೆ ಎಫ್‌ಆರ್‌ಪಿ ದರವನ್ನು ₹ 3,500 ನಿಗದಿಪಡಿಸಬೇಕು. ಫಸಲ್ ಬಿಮಾ ಬೆಳೆ ವಿಮೆ ಪದ್ಧತಿ ಬದಲಾಗಬೇಕು. ಪ್ರತಿ ರೈತನ ಹೊಲದ ಬೆಳೆ ವಿಮೆ ನಷ್ಟ ಪರಿಹಾರ ಸಿಗುವಂತಾಗಬೇಕು’ ಎಂದು ಹಕ್ಕೊತ್ತಾಯ ಮಂಡಿಸಿದ್ದಾರೆ.

ADVERTISEMENT

‘ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಬೆಳಿಗ್ಗೆ 6ರಿಂದ ಸಂಜೆ 6ರವರಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ದಲ್ಲಾಳಿಗಳು ರೈತರಿಂದ ಶೇ 10ರಷ್ಟು ಕಮಿಷನ್ ವಸೂಲಿ ಮಾಡುತ್ತಿರುವುದನ್ನು ನಿಲ್ಲಿಸಲು ಕಠಿಣ ಕಾನೂನು ಜಾರಿಗೆ ತರಬೇಕು. ತೆಲಂಗಾಣ ಮಾದರಿಯಲ್ಲಿ 60 ವರ್ಷ ತುಂಬಿದ ರೈತರಿಗೆ ತಿಂಗಳಿಗೆ ₹ 10ಸಾವಿರ ಪಿಂಚಣಿ ಯೋಜನೆ ಜಾರಿಗೆ ತರಬೇಕು. ರೈತನ ಮಗನನ್ನು ಮದುವೆ ಆಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ 25ರಷ್ಟು ಮೀಸಲಾತಿ ನೀಡುವ ನೀತಿ ಜಾರಿಗೆ ತರಬೇಕು. ಕೃಷಿ ಸಾಲ ವಸೂಲಾತಿಗಾಗಿ ರೈತರ ಜಮೀನು ವಶಡಿಸಿಕೊಳ್ಳುವ ಕಾಯ್ದೆ ರದ್ದುಪಡಿಸಬೇಕು. ನಕಲಿ ಬಿತ್ತನೆ ಬೀಜ, ನಕಲಿ ರಸಗೊಬ್ಬರ, ನಕಲಿ ಕೀಟನಾಶಕ ಮಾರಾಟ ಮಾಡುವ ಅಂಗಡಿಗಳ ಮಾಲೀಕರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಬೇಕು’ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.