ADVERTISEMENT

ಗೃಹಸಚಿವರ ವಿರುದ್ಧ ಬಿಜೆಪಿ ಆಕ್ರೋಶ

ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡದಂತೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 6 ಮೇ 2019, 19:58 IST
Last Updated 6 ಮೇ 2019, 19:58 IST
ಗೃಹ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಿಜೆಪಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಗೃಹ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಿಜೆಪಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.   

ಮೈಸೂರು: ಗೃಹ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಸಚಿವರು ಹಾಗೂ ಸಮ್ಮಿಶ್ರ ಸರ್ಕಾರ ಮಾಧ್ಯಮಗಳೂ ಸೇರಿದಂತೆ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಸೇಡಿನ ಕ್ರಮಗಳನ್ನು ಕೈಗೊಳ್ಳುತ್ತಿವೆ. ಬಿಜೆಪಿ ನೀಡಿದ ದೂರುಗಳನ್ನು ಪರಿಗಿಸುತ್ತಿಲ್ಲ ಎಂದು ಕಿಡಿಕಾರಿದರು.

ಮಹೇಶ್ ವಿಕ್ರಂ ಹೆಗ್ಡೆ, ಶ್ರುತಿ ಬೆಳ್ಳಕ್ಕಿ, ಶಾರದಾ ಡೈಮಂಡ್, ಹೇಮಂತಕುಮಾರ್ ಮತ್ತು ಅಜಿತ್‌ಶೆಟ್ಟಿ ಹೇರಂಜಿ ಸೇರಿದಂತೆ ಹಲವರ ಮೇಲೆ ನಿರಾಧಾರ ಪ್ರಕರಣಗಳನ್ನು ದಾಖಲಿಸಿ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

ADVERTISEMENT

ಇವರೆಲ್ಲರೂ ಬಿಜೆಪಿ ಕುರಿತು ಅಭಿಮಾನ ಹೊಂದಿರುವುದೇ ತಪ್ಪು ಎಂಬಂತೆ ಅವರ ಮೇಲೆ ಸೇಡಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ಹತ್ತಿಕ್ಕಲಾಗಿದೆ ಎಂದು ಹೇಳಿದರು.

ಹಲವು ಪ್ರಕರಣಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 307ರ ಪ್ರಕಾರ ಪ್ರಕರಣಗಳು ದಾಖಲಾಗಿದ್ದರೂ ಕೇವಲ ಬಿಜೆಪಿ ಕಾರ್ಯಕರ್ತರನ್ನು ಮತ್ತು ಅಭಿಮಾನಿಗಳನ್ನು ಬಂಧಿಸಲಾಗಿದೆ. ರಾಜಕೀಯ ದ್ವೇಷದ ಕ್ರಮಕ್ಕೆ ಪೊಲೀಸ್ ವ್ಯವಸ್ಥೆಯ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ನಡೆಯುತ್ತಿದ್ದರೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೌನಕ್ಕೆ ಶರಣಾಗಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರ ಹಕ್ಕು, ಸ್ವಾತಂತ್ರ್ಯವನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಭಾಯಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಬೇಕು ಎಂದು ಅವರು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮುಖಂಡರು ಮನವಿ ಸಲ್ಲಿಸಿದರು.

ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ಮುಖಂಡರಾದ ರಘು ಕೌಟಿಲ್ಯ, ಹೇಮಂತಕುಮಾರ್‌ಗೌಡ, ಬಿ.ವಿ.ಮಂಜುನಾಥ್, ಎಸ್.ಸತೀಶ್ ಹಾಗೂ ಪಕ್ಷದ ಪಾಲಿಕೆ ಸದಸ್ಯರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.