ADVERTISEMENT

ಭರವಸೆ ಈಡೇರಿಸುವಲ್ಲಿ ಬಿಜೆಪಿ ಸರ್ಕಾರ ವಿಫಲ: ಆರ್. ಧ್ರುವನಾರಾಯಣ ವಾಗ್ದಾಳಿ

\

​ಪ್ರಜಾವಾಣಿ ವಾರ್ತೆ
Published 8 ಜೂನ್ 2022, 13:22 IST
Last Updated 8 ಜೂನ್ 2022, 13:22 IST
   

ಮೈಸೂರು: ‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಎಲ್ಲ ರಂಗಗಳಲ್ಲೂ ವಿಫಲವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯೋಗದ ಭರವಸೆ ಈಡೇರಿಸುವಲ್ಲಿ ಸೋತಿದ್ದಾರೆ’ ಎಂದು ಕೆ‍‍ಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ವಾಗ್ದಾಳಿ ನಡೆಸಿದರು.

ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಈ ಸರ್ಕಾರಗಳು ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಆಸಕ್ತಿಯನ್ನೇ ತೋರುತ್ತಿಲ್ಲ. 80 ಲಕ್ಷ ಹುದ್ದೆಗಳು ಖಾಲಿ ಇವೆ. ಶೇ 30ರಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಮೋದಿ ನೀಡಿದ್ದ ಭರವಸೆ ಹಾಗೆಯೇ ಉಳಿದಿದೆ. ಇದರಿಂದ ಯುವಜನರ ಕನಸುಗಳು ನುಚ್ಚು ನೂರಾಗಿವೆ. ಪದವೀಧರರು ಇದೆಲ್ಲವನ್ನೂ ಗಮನಿಸಿ ಈ ಚುನಾವಣೆಯಲ್ಲಿ ನಿರ್ಧಾರ ಕೈಗೊಳ್ಳಬೇಕು’ ಎಂದರು.

ADVERTISEMENT

ಮತದಾರರಿಗೆ ತಿಳಿಸಿ:

‘ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರಗಳು ಅಪಾರ ಕೊಡುಗೆ ನೀಡಿವೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 6ನೇ ವೇತನ ಆಯೋಗದ ವರದಿ ಜಾರಿಗೊಳಿಸಿದ್ದರಿಂದ 6.50 ಲಕ್ಷ ಸರ್ಕಾರಿ ನೌಕರರಿಗೆ ಶೇ.30ರಷ್ಟು ವೇತನ ಹೆಚ್ಚಾಯಿತು. ಪಿಯು ಮತ್ತು ಪದವಿ ಕಾಲೇಜುಗಳ ಉಪನ್ಯಾಸಕರ ವೇತನ ತಾರತಮ್ಯ ಹೋಗಲಾಡಿಸಿದೆವು. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಯುಜಿಸಿ ಮಾನದಂಡದಂತೆ ಉಪನ್ಯಾಸಕರಿಗೆ ವೇತನ ಹೆಚ್ಚಿಸಲಾಯಿತು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು. ಇದೆಲ್ಲವನ್ನೂ ಮತದಾರರಿಗೆ ತಿಳಿಸಬೇಕು’ ಎಂದು ಹೇಳಿದರು.

‘ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ, ಅದನ್ನು ಮುಚ್ಚಿಡಲು ಧರ್ಮಾಧಾರಿತ ರಾಜಕಾರಣ ಮಾಡುತ್ತಿದೆ’ ಎಂದು ಟೀಕಿಸಿದರು.

ದಿಕ್ಸೂಚಿಯಾಗುತ್ತದೆ:

ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ‘ಈ ಸರ್ಕಾರದ ವೈಫಲ್ಯವನ್ನು ಅಂಕಿ–ಅಂಶಗಳ ಸಹಿತ ತಿಳಿಸಿದರೆ ಜನರು ಅರ್ಥ ಮಾಡಿಕೊಳ್ಳುತ್ತಾರೆ. ಪ್ರಜ್ಞಾವಂತರೆ ಮತ ಚಲಾಯಿಸಲಿರುವ ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಸೋತರೆ ಆ ಸಂದೇಶ ಎಲ್ಲ ಕಡೆಯೂ ಮುಟ್ಟುತ್ತದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ವಿಧಾನಸಭೆ ಚುನಾವಣೆಗಳಿಗೆ ದಿಕ್ಸೂಚಿಯಾಗುತ್ತದೆ’ ಎಂದರು.

ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಕೆಪಿಸಿಸಿ ಉಪಾಧ್ಯಕ್ಷ ಸೂರಜ್ ಹೆಗಡೆ, ಪ್ರಧಾನ ಕಾರ್ಯದರ್ಶಿ ಬಸವರಾಜು, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ. ವಿಜಯ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಶಿವಣ್ಣ, ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್, ವರುಣಾ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಶಿವನಾಗಪ್ಪ, ವರುಣಾ ಬ್ಲಾಕ್ ಅಧ್ಯಕ್ಷ ರಮೇಶ್ ಮುದ್ದೇಗೌಡ, ತಗಡೂರು ಬ್ಲಾಕ್ ಅಧ್ಯಕ್ಷ ರಂಗಸ್ವಾಮಿ, ಮುಖಂಡರಾದ ಶಿವಪ್ರಕಾಶ್, ಹೆಡತಲೆ ಮಂಜುನಾಥ್, ಉತ್ತನಹಳ್ಳಿ ಶಿವಣ್ಣ, ಸುರೇಶ್ ವಾಜಮಂಗಲ, ಸಕ್ಕಳ್ಳಿ ಬಸವರಾಜು ಮೊದಲಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.