ADVERTISEMENT

ಮೈಸೂರಲ್ಲಿ ಅರುಣ್‌ ಸಿಂಗ್‌: ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಇಲ್ಲವೆಂದ ಸಚಿವರು

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2021, 6:23 IST
Last Updated 31 ಆಗಸ್ಟ್ 2021, 6:23 IST
ಮೈಸೂರಿಗೆ ಬಂದ ಅರುಣ್ ಸಿಂಗ್ ಅವರು ಚಾಮುಂಡೇಶ್ವರಿ ತಾಯಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸಂಸದ ಪ್ರತಾಪ ಸಿಂಹ, ಮೇಯರ್ ಸುನಂದಾ ಫಾಲನೇತ್ರ, ನಗರ ಅಧ್ಯಕ್ಷ ಟಿ.ಎಸ್. ಶ್ರೀವತ್ಸ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಇದ್ದರು.
ಮೈಸೂರಿಗೆ ಬಂದ ಅರುಣ್ ಸಿಂಗ್ ಅವರು ಚಾಮುಂಡೇಶ್ವರಿ ತಾಯಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸಂಸದ ಪ್ರತಾಪ ಸಿಂಹ, ಮೇಯರ್ ಸುನಂದಾ ಫಾಲನೇತ್ರ, ನಗರ ಅಧ್ಯಕ್ಷ ಟಿ.ಎಸ್. ಶ್ರೀವತ್ಸ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಇದ್ದರು.   

ಮೈಸೂರು:ಬಿಜೆಪಿಯು ಚುನಾವಣೆ ವೇಳೆ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಇಲ್ಲ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದರು.

ಮೈಸೂರಿನಲ್ಲಿ ಮಂಗಳವಾರ ಮಾಧ್ಯಮದವರ ಜತೆ ಮಾತನಾಡಿ, 'ರಾಜ್ಯದ ಜನರು ಜೆಡಿಎಸ್, ಕಾಂಗ್ರೆಸ್ ಎರಡೂ ಸರ್ಕಾರಗಳನ್ನು ನೋಡಿದ್ದಾರೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವ ದೃಢ ಸಂಕಲ್ಪ ನಮ್ಮದು' ಎಂದರು.

'ಬಿ.ಎಸ್.ಯಡಿಯೂರಪ್ಪ ಅವರು ದೊಡ್ಡ ನಾಯಕ. ಅವರಿಗೆ ಸಂಘಟನೆ ಬಗ್ಗೆ ಅನುಭವ ಇದೆ. ಅವರ ಅನುಭವವನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ' ಎಂದು ತಿಳಿಸಿದರು.

ADVERTISEMENT

'ಬಸವರಾಜ ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ರಾಜ್ಯ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ‌. ಖಾತೆ ಹಂಚಿಕೆ ಮುಖ್ಯಮಂತ್ರಿಯ ಪರಮಾಧಿಕಾರ ಆಗಿದ್ದು, ಅದರಲ್ಲಿ ನಮ್ಮ ಯಾವುದೇ ಪಾತ್ರ ಇರುವುದಿಲ್ಲ. ಖಾತೆಗಳು ಹಂಚಿಕೆಯಾಗಿ ಎಲ್ಲ ಸಚಿವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ' ಎಂದು ಹೇಳಿದರು.

'ಹಳೇ ಮೈಸೂರು ಭಾಗದಲ್ಲಿ ದಿನ‌ ದಿನಕ್ಕೂ ಪಕ್ಷ ಸಂಘಟನೆ‌ ಹೆಚ್ಚಾಗುತ್ತಿದೆ. ಈ ಭಾಗದಲ್ಲೂ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೇವೆ' ಎಂದು‌ ವಿಶ್ವಾಸ ವ್ಯಕ್ತಪಡಿಸಿದರು.

ಚಾಮುಂಡಿ ಬೆಟ್ಟಕ್ಕೆ ಭೇಟಿ:ಅರುಣ್ ಸಿಂಗ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಬಂದರು. ಬೆಳಗ್ಗೆ 8 ಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದರು.

ಸಚಿವರ ಕಾರ್ಯಕ್ರಮ: ಮೈಸೂರು, ಮೈಸೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲಾಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದು, ಆ ಬಳಿಕ ಜಿಲ್ಲಾ ಕೋರ್ ಸಮಿತಿ, ಬಿಜೆಪಿ ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.