ADVERTISEMENT

ಮೈಸೂರು ಭಾಗದಲ್ಲಿ ಪಕ್ಷ ಬಲವರ್ಧನೆ: ಬಿ.ವೈ. ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 7 ಜುಲೈ 2025, 2:24 IST
Last Updated 7 ಜುಲೈ 2025, 2:24 IST
ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿದರು – ಪ್ರಜಾವಾಣಿ ಚಿತ್ರ
ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿದರು – ಪ್ರಜಾವಾಣಿ ಚಿತ್ರ   

ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾತಿನಿಧ್ಯದ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆಯ ಸವಾಲು ಸ್ವೀಕರಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ನಗರದ ರಾಜೇಂದ್ರ ಕಲಾಮಂದಿರದಲ್ಲಿ ಭಾನುವಾರ ಬಿಜೆಪಿಯ ಜಿಲ್ಲಾ ಗ್ರಾಮಾಂತರ ಘಟಕವು ಆಯೋಜಿಸಿದ್ದ ಕಾರ್ಯಕರ್ತರ ಸಂಘಟನಾತ್ಮಕ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ‘ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಿಂದ ಹೆಚ್ಚು ಮಂದಿ ಶಾಸಕರಾಗಿ ಗೆಲ್ಲಬೇಕು. ಇದಕ್ಕಾಗಿ ಕಾರ್ಯಕರ್ತರು ಹಾಗೂ ಮುಖಂಡರ ಬೆಂಬಲಕ್ಕೆ ನಿಲ್ಲುತ್ತೇನೆ’ ಎಂದರು.

‘ಮೈಸೂರು ಭಾಗದ ಜನರು ಇಂದಿಗೂ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ನೀಡಿದ ಕೊಡುಗೆಯನ್ನು ಸ್ಮರಿಸುತ್ತಾರೆ. ಅಷ್ಟರ ಮಟ್ಟಿಗೆ ಬಿಎಸ್‌ವೈ ಅನುದಾನ ನೀಡಿದ್ದಾರೆ. ಆದರೆ ಮೈಸೂರಿನವರೇ ಆದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಈ ಭಾಗಕ್ಕೆ ನೀಡಿದ ಕೊಡುಗೆ ಏನು? ಈ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ’ ಎಂದು ಸವಾಲು ಹಾಕಿದರು.

ADVERTISEMENT

‘ಗ್ಯಾರಂಟಿ ಯೋಜನೆಗಳನ್ನು ಕೊಡಿ ಎಂದು ರಾಜ್ಯದ ಯಾರೂ ಕಾಂಗ್ರೆಸ್‌ನವರನ್ನು ಕೇಳಿರಲಿಲ್ಲ. ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸವನ್ನು ಮಾಡಲಾಗುತ್ತಿದೆ. ಇದು ಜನರ ಜೇಬಿಗೆ ಕತ್ತರಿ ಹಾಕುವ ಬೋಗಸ್ ಸರ್ಕಾರ’ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ 11 ವರ್ಷದ ಸಾಧನೆಯ ಬಗ್ಗೆ ಆರ್ಥಿಕ ತಜ್ಞ ವಿಶ್ವನಾಥ್ ಭಟ್ ಉಪನ್ಯಾಸ ನೀಡಿದರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್. ಸುಬ್ಬಣ್ಣ, ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷರಾದ ಎಂ.ರಾಜೇಂದ್ರ, ಎನ್. ಮಹೇಶ್, ಕಾರ್ಯದರ್ಶಿ ಶರಣು ತಳ್ಳಿಕೇರಿ, ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಅನಿಲ್ ಥಾಮಸ್, ಪ್ರಕೋಷ್ಟ ಸಂಚಾಲಕ ಎನ್.ವಿ. ಫಣೀಶ್, ಮುಖಂಡರಾದ ಹರ್ಷವರ್ಧನ್, ನಿರಂಜನ್ ಕುಮಾರ್ ಪಾಲ್ಗೊಂಡಿದ್ದರು. 

ಅಹಿಂದ ಹೆಸರೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಕೇವಲ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದ್ದು ಹಿಂದುಳಿದವರನ್ನು ಮರೆತಿದ್ದಾರೆ. ಅವರ ಭ್ರಷ್ಟಾಚಾರದ ಮುಖವಾಡ ಕಳಚಿದ್ದೇವೆ
ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.