ADVERTISEMENT

ಬಸ್‌ ಪಾಸ್‌ ದರ ಏರಿಕೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ವ್ಯಾಪಕ ವಿರೋಧ

​ಪ್ರಜಾವಾಣಿ ವಾರ್ತೆ
Published 15 ಜೂನ್ 2019, 10:17 IST
Last Updated 15 ಜೂನ್ 2019, 10:17 IST
ವಿದ್ಯಾರ್ಥಿಗಳ ಬಸ್ ಪಾಸ್‌ ದರ ಏರಿಕೆ ಖಂಡಿಸಿ ಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯ ಬಳಿ ಶುಕ್ರವಾರ ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು
ವಿದ್ಯಾರ್ಥಿಗಳ ಬಸ್ ಪಾಸ್‌ ದರ ಏರಿಕೆ ಖಂಡಿಸಿ ಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯ ಬಳಿ ಶುಕ್ರವಾರ ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು   

ಮೈಸೂರು: ವಿದ್ಯಾರ್ಥಿಗಳ ಬಸ್ ಪಾಸ್ ದರ ಹೆಚ್ಚಳ ಖಂಡಿಸಿ ಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಶುಕ್ರವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

‘ಬಡ ವಿದ್ಯಾರ್ಥಿಗಳು ದೂರದ ಊರಿನಿಂದ ನಗರದ ಕಾಲೇಜುಗಳಿಗೆ ಶಿಕ್ಷಣ ಪಡೆಯಲು ಬರುತ್ತಾರೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಈಗ ಜಾಲ್ತಿಯಲ್ಲಿರುವ ಬಸ್ ಪಾಸ್ ದರ ನೀಡಲು ಕಷ್ಟಪಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಾಸ್ ದರವನ್ನು ಏರಿಕೆ ಮಾಡಲು ಹೊರಟಿರುವುದು ಸರಿಯಲ್ಲ’ ಎಂದು ಎಐಡಿಎಸ್‌ಒ ಸಂಘಟನೆಯ ಕಾರ್ಯದರ್ಶಿ ಚಂದ್ರಕಲಾ ತಿಳಿಸಿದರು.

ಕಳೆದ ಬಾರಿ ಲಕ್ಷಾಂತರ ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ರಾಜ್ಯಾದ್ಯಂತ ಹೋರಾಟ ಮಾಡಿದ ಪರಿಣಾಮವಾಗಿ ಬಸ್ ಪಾಸ್ ದರವನ್ನು ₹ 1,200 ರಿಂದ ₹ 900ಕ್ಕೆ ಇಳಿಸಲಾಗಿತ್ತು. ಆದರೆ, ಈಗ ಸರ್ಕಾರ ಪಾಸ್ ದರ ಹೆಚ್ಚಿಸಿರುವುದು ನಿಜಕ್ಕೂ ಅನ್ಯಾಯ ಎಂದು ಹೇಳಿದರು.

ADVERTISEMENT

ಸರ್ಕಾರ ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆಯ ಪ್ರಸ್ತಾವವನ್ನು ಕೈ ಬಿಡಬೇಕು. ಹಿಂದಿನಂತೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಿದರು.

ಹಣದ ಕೊರತೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳುತ್ತಿರುವುದು ಸಮಂಜಸವಲ್ಲ. ಐಷಾರಾಮಿ ಬಂಗಲೆಗಳ ನಿರ್ಮಾಣಕ್ಕೆ ಮತ್ತು ಉಪಯೋಗವಿಲ್ಲದ ಇನ್ನಿತರೆ ಯೋಜನೆಗಳಿಗೆ ಸರ್ಕಾರ ಕೋಟಿ ಕೋಟಿ ಹಣ ಖರ್ಚು ಮಾಡುತ್ತಿದೆ. ಆರ್ಥಿಕ ಹೊರೆಯನ್ನು ವಿದ್ಯಾರ್ಥಿಗಳ ಮೇಲೆ ಹಾಕುವುದು ಸರ್ವಥಾ ಸರಿಯಲ್ಲ ಎಂದು ಎಐಡಿಎಸ್‌ಒ ಸಂಘಟನೆಯ ಖಜಾಂಜಿ ಆಸಿಯಾ ಬೇಗಂ ಹೇಳಿದರು.

ಸರ್ಕಾರ ಈ ಪ್ರಸ್ತಾಪವನ್ನು ಕೈಬಿಡದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನಗರದ ವಿವಿಧ ಶಾಲಾ–ಕಾಲೇಜುಗಳಿಂದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.