ADVERTISEMENT

ಜಾತಿ ಸಮೀಕ್ಷೆ ವರದಿ: ಅಧ್ಯಯನ

ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರಬಾಬು ಹೇಳಿಕೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 6:10 IST
Last Updated 12 ಡಿಸೆಂಬರ್ 2020, 6:10 IST

ಮೈಸೂರು: ‘ಹಿಂದುಳಿದ ವರ್ಗಗಳ ಆಯೋಗದ ಈ ಹಿಂದಿನ ಅಧ್ಯಕ್ಷ ಕಾಂತರಾಜು ನೇತೃತ್ವದಲ್ಲಿ ಸಿದ್ಧಪಡಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಜನಗಣತಿ) ವರದಿಯು ರಾಜ್ಯ ಸರ್ಕಾರಕ್ಕೆ ಇನ್ನೂ ಸಲ್ಲಿಕೆಯಾಗಿಲ್ಲ. ಸಮೀಕ್ಷೆಯ ಈ ವರದಿಯನ್ನು ಈಗಿನ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಮತ್ತೊಮ್ಮೆ ಅಧ್ಯಯನ ನಡೆಸುತ್ತಿದ್ದಾರೆ’ ಎಂದು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು ಶುಕ್ರವಾರ ಇಲ್ಲಿ ತಿಳಿಸಿದರು.

‘ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಮೋರ್ಚಾದ ನಿಯೋಗವು, ಜಯಪ್ರಕಾಶ ಹೆಗ್ಡೆ ಅವರನ್ನು ಭೇಟಿಯಾಗಿ ಮನವಿ ಮಾಡಿದೆ. ಅಧ್ಯಕ್ಷರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ವರದಿ ಸಲ್ಲಿಕೆಯಾದ ಬಳಿಕ, ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಡಿ.16ರಂದು ನಡೆಯಲಿದ್ದು, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಉದ್ಘಾಟಿಸಲಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಕೇಂದ್ರ–ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ಕುರಿತಂತೆ ಚರ್ಚೆ ನಡೆಯಲಿದೆ’ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ಇದೇ ವೇಳೆ ಹಿಂದುಳಿದ ವರ್ಗಗಳ ರಾಜ್ಯ ಮೋರ್ಚಾದ ಕಾರ್ಯಕಾರಿಣಿ ಸದಸ್ಯರ ನೇಮಕಾತಿ ಪಟ್ಟಿ
ಯನ್ನು ಬಿಡುಗಡೆಗೊಳಿಸಲಾಯಿತು. ಮೈ.ಪು. ರಾಜೇಶ್‌ ಮೈಸೂರು ನಗರ ಪ್ರತಿನಿಧಿಸಿದರೆ, ಉಮೇಶ್‌ ಕುಮಾರ್‌ ಮೈಸೂರು ಗ್ರಾಮಾಂತರ ಜಿಲ್ಲೆ ಪ್ರತಿನಿಧಿಸಲಿದ್ದಾರೆ.

ಮೋರ್ಚಾ ಉಪಾಧ್ಯಕ್ಷ ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಬಿಜೆಪಿ ಮೈಸೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಒಬಿಸಿ ಘಟಕದ ಅಧ್ಯಕ್ಷ ಪರಶುರಾಮಪ್ಪ, ಒಬಿಸಿ ನಗರ ಕಾರ್ಯದರ್ಶಿ ಜೋಗಿ ಮಂಜು ಪತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.