ADVERTISEMENT

ಚಾಮುಂಡಿ ಬೆಟ್ಟಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ: ಸಚಿವ ಡಾ.ಎಚ್.ಸಿ. ಮಹದೇವಪ್ಪ

ಸಂಘಟನೆಗಳಿಂದ ವಿರೋಧ ವ್ಯಕ್ತವಾದ್ದರಿಂದ ಸಭೆ ನಡೆಸಿದ ಸಚಿವ

​ಪ್ರಜಾವಾಣಿ ವಾರ್ತೆ
Published 22 ಜನವರಿ 2026, 3:02 IST
Last Updated 22 ಜನವರಿ 2026, 3:02 IST
ಮೈಸೂರಿನಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಮಾತನಾಡಿದರು
ಮೈಸೂರಿನಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಮಾತನಾಡಿದರು   
ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ | ಬೆಟ್ಟದಲ್ಲಿ ‘ಕಲ್ಲಿನ ಕ್ಯೂ ಮಂಟಪ’ ನಿರ್ಮಾಣ | ದರ್ಶನಕ್ಕೆ ಬರುವವರ ಅನುಕೂಲಕ್ಕಾಗಿ ಕ್ರಮ

ಮೈಸೂರು: ‘ಪ್ರಸಾದ್ ಯೋಜನೆಯಡಿ ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಪ್ರಸಾದ್’ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಚಾಮುಂಡಿಬೆಟ್ಟದಲ್ಲಿ ಪರಿಸರಕ್ಕೆ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಬೆಟ್ಟಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಅವರಿಗೆ ಯಾವುದೇ ತೊಂದರೆ ಆಗದಂತೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಅಭಿವೃದ್ಧಿ ಮಾಡಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದರು. 

ADVERTISEMENT

ವಾಸಿಸುವವರಿಗೆ ತೊಂದರೆ ಆಗದಂತೆ: ‘ಬೆಟ್ಟದಲ್ಲಿ ವಾಸಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಆದ್ದರಿಂದಲೇ ಅಲ್ಲಿನ ನಿವಾಸಿಗಳ ಅಹವಾಲುಗಳನ್ನು ಹಾಗೂ ಅನಿಸಿಕೆಗಳನ್ನು ಸ್ವೀಕರಿಸಲಾಗುತ್ತಿದೆ. ಅವರ ಸಲಹೆಗಳನ್ನು ಪಡೆದು ಅದರಂತೆ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ, ‘ವಿವಿಐಪಿ (ಅತಿಗಣ್ಯರ) ದರ್ಶನದ ಸಂದರ್ಭದಲ್ಲಿ ಇತರರು ಹೆಚ್ಚಿನ ಸಂಖ್ಯೆಯಲ್ಲಿ ನುಗ್ಗುವುದರಿಂದ ಗೊಂದಲ ಉಂಟಾಗುತ್ತದೆ. ಇದಕ್ಕೆ ಪರಿಹಾರ ರೂಪಿಸಬೇಕು. ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಈ ಹಿಂದೆ ಬೆಟ್ಟದಲ್ಲಿ ಅಂಗಡಿ ಮಳಿಗೆಗಳನ್ನು ಇಟ್ಟಿಕೊಂಡಿದ್ದ ಅರ್ಹರಿಗೆ ಮಾತ್ರ ಮಳಿಗೆ ಮಾಡಲು ಅವಕಾಶ ನೀಡಬೇಕು’ ಎಂದು ಹೇಳಿದರು.

₹ 45.70 ಕೋಟಿ ಅನುದಾನ: ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ‘ಪ್ರಸಾದ್ ಯೋಜನೆಯಡಿ ₹ 45.70 ಕೋಟಿ ಅನುದಾನ ಮಂಜೂರಾಗಿದೆ. ಭಕ್ತರ ಸುಗಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲು ಸರದಿ ಸಾಲಿಗಾಗಿ ‘ಕಲ್ಲಿನ ಕ್ಯೂ ಮಂಟಪ’ ನಿರ್ಮಿಸಲಾಗುವುದು. ಮಹಾಬಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಕ್ಯೂ ಬಂದು ದೇವಸ್ಥಾನದ ಮುಂಭಾಗದಲ್ಲಿ ಬಂದು ಸೇರುತ್ತದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್‌ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್‌, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.