ADVERTISEMENT

ಬಾಲ್ಯವಿವಾಹ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿ: DC ಲಕ್ಷ್ಮೀಕಾಂತರೆಡ್ಡಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 7:09 IST
Last Updated 20 ಡಿಸೆಂಬರ್ 2025, 7:09 IST
ಜಿ. ಲಕ್ಷ್ಮೀಕಾಂತ ರೆಡ್ಡಿ
ಜಿ. ಲಕ್ಷ್ಮೀಕಾಂತ ರೆಡ್ಡಿ   

ಮೈಸೂರು: ‘ಅಲ್ಪಸಂಖ್ಯಾತ ಸಮುದಾಯದವರು ವಾಸಿಸುವ ಸ್ಥಳಗಳಲ್ಲಿ ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚೆಚ್ಚು ಆಯೋಜಿಸಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಧಾನ ಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಕಾರ್ಮಿಕ ಇಲಾಖೆಯವರು ದಿಢೀರ್‌ ಭೇಟಿ ಕೊಟ್ಟು ಪರಿಶೀಲಿಸಬೇಕು. ದಾಳಿ ನಡೆಸಬೇಕು. ಬಾಲಕಾರ್ಮಿಕರು ಕಂಡುಬಂದಲ್ಲಿ ಪ್ರಕರಣ ದಾಖಲಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಮಾದಕ ವಸ್ತುಗಳ ಮಾರಾಟ ತಡೆಯಬೇಕು. ಸಂಚಾರ ನಿಯಮ ಪಾಲಿಸದಿರುವುದು ಮೊದಲಾದವುಗಳನ್ನು ಪರಿಶೀಲಿಸುವಂತೆ ಕೋರಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಬೇಕು’ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗೆ ತಿಳಿಸಿದರು.

ADVERTISEMENT

‘ಜೈನ ಸಮುದಾಯ ವಾಸಿಸುವ ಸ್ಥಳದಲ್ಲಿ ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಜೊತೆಗೆ, ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಬಗ್ಗೆ ತಿಳಿಸಿಕೊಡಲು ಶಿಬಿರಗಳನ್ನು ಆಯೋಜಿಸಬೇಕು. ಅರ್ಹರಿಗೆ ಜಾತಿ ಪ್ರಮಾಣಪತ್ರ ಪಡೆದುಕೊಳ್ಳಲು ಸಹಕರಿಸಬೇಕು’ ಎಂದು ಸೂಚಿಸಿದರು.

‘ಮೈಸೂರು ನಗರದಲ್ಲಿ ಜೈನ ಸಮುದಾಯದವರಿಗೆ ಸ್ಮಶಾನಕ್ಕೆ ಸ್ಥಳದ ಬಗ್ಗೆ ಮನವಿ ಸಲ್ಲಿಸಿದ್ದು, ಈ ಬಗ್ಗೆ ತಹಶೀಲ್ದಾರ್‌ಗೆ ಪತ್ರ ಬರೆಯಬೇಕು ಹಾಗೂ ಬನುಮಯ್ಯ ಕಾಲೇಜು ಬಳಿ ಇರುವ ಜೈನ ಬಸದಿ ಸುತ್ತಳತೆ ಗುರುತಿಸಿಕೊಡಲು ಜಿಲ್ಲೆಯ ಭೂ ದಾಖಲೆಗಳ ಉಪನಿರ್ದೇಶಕರಿಗೆ ಪತ್ರ ಬರೆಯಬೇಕು’ ಎಂದು ನಿರ್ದೇಶನ ನೀಡಿದರು.

ನಾಮನಿರ್ದೇಶನ ಸದಸ್ಯರಾದ ಸುರೇಶ್ ಕುಮಾರ್ ಜೈನ್ ಹಾಗೂ ಸುಬಾನ್ ಅಲ್ಪಸಂಖ್ಯಾತ ಸಮುದಾಯದ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಯುಕೇಶ್‌ಕುಮಾರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಿಲ್ಪಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.