ADVERTISEMENT

ರಕ್ಷಣೆಗೆ ಒತ್ತಾಯಿಸಿ ವೈದ್ಯರ ಪ್ರತಿಭಟನೆ: ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಣೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 4:24 IST
Last Updated 19 ಜೂನ್ 2021, 4:24 IST
ಭಾರತೀಯ ವೈದ್ಯಕೀಯ ಸಂಘದ ಮೈಸೂರು ವಿಭಾಗದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು
ಭಾರತೀಯ ವೈದ್ಯಕೀಯ ಸಂಘದ ಮೈಸೂರು ವಿಭಾಗದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು   

ಮೈಸೂರು: ವೈದ್ಯರ ಮೇಲೆ ಹೆಚ್ಚುತ್ತಿರುವ ಹಲ್ಲೆ ಖಂಡಿಸಿ ಹಾಗೂ ರಕ್ಷಣೆಗೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಜಿಲ್ಲೆಯ 865 ಕ್ಕೂ ಅಧಿಕ ಮಂದಿ ವೈದ್ಯರು ಶುಕ್ರವಾರ ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸುವ ಮೂಲಕ ಪ್ರತಿರೋಧ ವ್ಯಕ್ತಪಡಿಸಿದರು.

ಕೋವಿಡ್‌ ವಿರುದ್ಧ ನಡೆದಿರುವ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುವವರು ವೈದ್ಯರು. ಆದರೆ, ಇತ್ತೀಚಿನ ದಿನಗಳಲ್ಲಿ ವೈದ್ಯರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ ಎಂದು ವೈದ್ಯರು ಆತಂಕ ವ್ಯಕ್ತಪಡಿಸಿದರು.

ಸಂಘದ ಮೈಸೂರು ವಿಭಾಗದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ADVERTISEMENT

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆಯಾದರೆ ಆರೋಪಿಗಳಿಗೆ ಕೂಡಲೇ ಶಿಕ್ಷೆಯಾಗುವಂತಹ ಕಠಿಣ ಕಾನೂನು ರೂಪಿಸಬೇಕು.ವೈದ್ಯರು ಮಾನಸಿಕ, ದೈಹಿಕ ಕಿರುಕುಳದ ಯಾವುದೇ ಭಯವಿಲ್ಲದೆ ಕೆಲಸ ಮಾಡುವ ವಾತಾವರಣ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ವೈದ್ಯರನ್ನು ಹುತಾತ್ಮರೆಂದು ಪರಿಗಣಿಸಬೇಕು. ಅವರ ಕುಟುಂಬದವರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ಕೋವಿಡ್ ಮೊದಲ ಅಲೆಯಲ್ಲಿ ದೇಶದಲ್ಲಿ ಒಟ್ಟು 754 ವೈದ್ಯರು ಮೃತಪಟ್ಟರು. ಇವರಲ್ಲಿ ಕೇವಲ 168 ವೈದ್ಯರಿಗೆ ಮಾತ್ರವೇ ಪರಿಹಾರ ದೊರಕಿದೆ. ಪರಿಹಾರ ವಿತರಿಸುವ, ಸಂತ್ರಸ್ತ ವೈದ್ಯರ ಕುಟುಂಬಗಳನ್ನು ಗುರುತಿಸುವ ಕೆಲಸ ಇನ್ನಷ್ಟು ಪರಿಣಾಮಕಾರಿಯಾಗಬೇಕು ಎಂದು ಅವರು ಒತ್ತಾಯಿಸಿದರು.

ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಬೇಕು. ಈ ಕುರಿತು ಜನರಲ್ಲಿ ಮೂಡಿರುವ ಅಪನಂಬಿಕೆಗಳನ್ನು ಹೋಗಲಾಡಿಸಬೇಕು. ಎಲ್ಲರಿಗೂ ಲಸಿಕೆ ಸಿಗುವಂತಾಗಬೇಕು ಎಂದು ಅವರು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಎನ್.ಆನಂದರವಿ, ಕಾರ್ಯದರ್ಶಿ ಡಾ.ಎನ್.ಚಂದ್ರಭನ್‌ಸಿಂಗ್, ನಿಕಟಪೂರ್ವ ಅಧ್ಯಕ್ಷ ಡಾ.ಸುರೇಶ್‌ ರುದ್ರಪ್ಪ, ಪದಾಧಿಕಾರಿಗಳಾದ ಡಾ.ಸುಜಾತಾ ಎಸ್.ರಾವ್, ಡಾ.ವೈ.ಎಂ.ಶಿವಕುಮಾರ್, ಡಾ.ಎಲ್.ಮಹೇಂದ್ರ, ಡಾ.ಡಿ.ಪರಮೇಶ್ವರ ನಾಯಕ ಹಾಗೂ ಇತರರು ಇದ್ದರು.

ಬಹುತೇಕ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.