ADVERTISEMENT

‘ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಮಾಡಿಸಿ’

ಕೈಗಾರಿಕಾ ಸಂಘದ ಪ್ರತಿನಿಧಿಗಳ ಜತೆ ಜಿಲ್ಲಾಧಿಕಾರಿ ಸಭೆ: ಕೈಗಾರಿಕೋದ್ಯಮಿಗಳ ಸಹಕಾರ ಕೋರಿಕೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 4:55 IST
Last Updated 31 ಅಕ್ಟೋಬರ್ 2020, 4:55 IST
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕೈಗಾರಿಕೆಗಳ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕೈಗಾರಿಕೆಗಳ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು   

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಮೈಸೂರು ಜಿಲ್ಲೆಯ ಕೈಗಾರಿಕೆ ಗಳ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಮಾಡಿಸಲು ಕೈಗಾರಿಕೋದ್ಯಮಿಗಳು ಸಹಕರಿಸಬೇಕು ಎಂದು ತಿಳಿಸಿದರು.

ಕೋವಿಡ್ ಪರೀಕ್ಷೆ ಮಾಡಿಸಲು ಕೈಗಾರಿಕಾ ಸಂಘದವರು ನಿಗದಿತ ಸ್ಥಳವನ್ನು ಸೂಚಿಸಿದರೆ, ಜಿಲ್ಲಾಡಳಿತದಿಂದ ಉಚಿತವಾಗಿ ಪರೀಕ್ಷೆ ಮಾಡಲಾಗುತ್ತದೆ. ಕಾರ್ಮಿಕರಿಗೆ ಅನುಕೂಲವಾಗುವಂತೆ ಎಲ್ಲೆಲ್ಲಿ ಪರೀಕ್ಷೆ ನಡೆಸಬೇಕು ಎಂಬ ಬಗ್ಗೆ ಕೂಡಲೇ ಮಾಹಿತಿ ನೀಡಬೇಕು ಎಂದರು.

ADVERTISEMENT

ಜಿಲ್ಲೆಯಲ್ಲಿ ಅನೇಕ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ 50 ವರ್ಷ ವಯಸ್ಸಿಗಿಂತ ಮೇಲಿನ ಕಾರ್ಮಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಅದರಲ್ಲೂ ಮಧುಮೇಹ, ಅಧಿಕ ರಕ್ತದೊತ್ತಡ ಒಳಗೊಂಡಂತೆ ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರ ಮೇಲೆ ನಿಗಾ ಇಡಬೇಕು. ಅವರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದರೆ ಕೂಡಲೇ ಪರೀಕ್ಷೆ ಮಾಡಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಅಮರನಾಥ್, ನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜು, ಮೈಸೂರು ಕೈಗಾರಿಕೆಗಳ ಸಂಘದ ಅಧ್ಯಕ್ಷ ವಾಸು, ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್, ಜೆಕೆ ಟೈರ್ಸ್ ಸಂಸ್ಥೆಯ ಉಪಾಧ್ಯಕ್ಷ ಈಶ್ವರ ರಾವ್, ಅಲೋಕ್ ಗುಪ್ತ ಉಪಸ್ಥಿತರಿದ್ದರು.

118 ಮಂದಿಗೆ ಕೋವಿಡ್‌

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳು ಇಳಿಮುಖವಾಗುತ್ತಿದ್ದು, 118 ಹೊಸ ಪ್ರಕರಣಗಳು ವರದಿಯಾಗಿವೆ. ಇತ್ತೀಚಿನ ದಿನಗಳಲ್ಲಿ ದಾಖಲಾದ ಅತಿ ಕಡಿಮೆ ಪ್ರಕರಣ ಇದು.

ಇದೇ ವೇಳೆ 236 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,781ಕ್ಕೆ ಇಳಿಕೆಯಾಗಿದೆ. ಒಬ್ಬರು ಮೃತಪಟ್ಟಿದ್ದು, ಸತ್ತವರ ಸಂಖ್ಯೆ 956 ಆಗಿದೆ.

867 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 149 ಮಂದಿ, ಖಾಸಗಿ ಆಸ್ಪತ್ರೆಗಳಲ್ಲಿ 484 ಮಂದಿ, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 59, ಖಾಸಗಿ ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 81, ಕೋವಿಡ್‌ ಕೇರ್‌ ಕೇಂದ್ರದಲ್ಲಿ 117, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 24 ಮಂದಿ ಆರೈಕೆ ಪಡೆಯುತ್ತಿದ್ದಾರೆ.

ರೋಗಿಗಳ ಸಂಪರ್ಕಕ್ಕೆ ಬಂದ 67 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 32 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 5 ಹಾಗೂ ಇತರ 14 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.