ADVERTISEMENT

ಬೆಳೆ ಸಮೀಕ್ಷೆ ರೈತರಿಗೆ ಸಹಕಾರಿ: ಸಚಿವ ವೆಂಕಟೇಶ್

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2024, 13:37 IST
Last Updated 1 ಅಕ್ಟೋಬರ್ 2024, 13:37 IST
ಬೆಟ್ಟದಪುರ ಸಮೀಪದ ಮೇಗಳಕೊಪ್ಪಲು ಗ್ರಾಮದಲ್ಲಿ ಮುಂಗಾರು ಬೆಳೆ ಸಮೀಕ್ಷೆ ಪೋಸ್ಟರ್ ಅನ್ನು ಪಶುಸಂಗೋಪನೆ ಹಾಗೂ ರೇಷ್ಮೆಇಲಾಖೆ ಸಚಿವ ಕೆ.ವೆಂಕಟೇಶ್ ಬಿಡುಗಡೆ ಮಾಡಿದರು
ಬೆಟ್ಟದಪುರ ಸಮೀಪದ ಮೇಗಳಕೊಪ್ಪಲು ಗ್ರಾಮದಲ್ಲಿ ಮುಂಗಾರು ಬೆಳೆ ಸಮೀಕ್ಷೆ ಪೋಸ್ಟರ್ ಅನ್ನು ಪಶುಸಂಗೋಪನೆ ಹಾಗೂ ರೇಷ್ಮೆಇಲಾಖೆ ಸಚಿವ ಕೆ.ವೆಂಕಟೇಶ್ ಬಿಡುಗಡೆ ಮಾಡಿದರು   

ಬೆಟ್ಟದಪುರ: ‘ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ನಡೆಯುತ್ತಿದೆ. ರೈತರು ತಾವೇ ಮೊಬೈಲ್ ಅಪ್ಲಿಕೇಶನ್ ಬಳಕೆ ಮಾಡಿಕೊಂಡು ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ’ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ. ವೆಂಕಟೇಶ್ ಹೇಳಿದರು.

ಸಮೀಪದ ಮೇಗಳಕೊಪ್ಪಲು ಗ್ರಾಮದಲ್ಲಿ ಮುಂಗಾರು ಬೆಳೆ ಸಮೀಕ್ಷೆ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಈ ಸಮೀಕ್ಷೆಯಿಂದ ರೈತರಿಗೆ ಆಗುವ ಉಪಯೋಗದ ಬಗ್ಗೆ ಸರಿಯಾದ ಮಾಹಿತಿ ಹಾಗೂ ಪ್ರಚಾರ ಮಾಡುವಂತೆ’ ಕೃಷಿ, ಕಂದಾಯ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಶೀಲ್ದಾರ್ ನಿಸರ್ಗ ಪ್ರಿಯ ಮಾತನಾಡಿ, ‘ರೈತರೇ ತಾವು ಬೆಳೆದ ಬೆಳೆಯ ಚಿತ್ರಗಳ ಸಮೇತ ಮಾಹಿತಿಯನ್ನು ಅಪ್ಲಿಕೇಶನ್ ಬಳಸಿ ಮೊಬೈಲ್‍ನಲ್ಲೇ ದಾಖಲಿಸಬಹುದು. ಹೀಗೆ ಮಾಡುವ ಮೂಲಕ ಬೆಳೆ ಹಾನಿಯಾದಲ್ಲಿ, ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ’ ಎಂದರು.

ADVERTISEMENT

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಮಾತನಾಡಿ ಬೆಳೆ ಸಮೀಕ್ಷೆ ವಿಷಯದಲ್ಲಿ ಮೊದಲ ಹಂತದಲ್ಲಿ ರೈತರಿಗೆ ಬೆಳೆ ಸಮೀಕ್ಷೆ ಮಾಡಲು ಅವಕಾಶ ನೀಡಲಾಗುತ್ತದೆ. ಆನಂತರ ಬೆಳೆ ಸಮೀಕ್ಷೆ ಮಾಡಲು ಖಾಸಗಿ ವ್ಯಕ್ತಿಗಳನ್ನು ಕಳುಹಿಸಲಾಗುತ್ತದೆ. ಮೂರನೇ ಹಂತದಲ್ಲಿ ಖಾಸಗಿ ವ್ಯಕ್ತಿಗಳು ಕೊಟ್ಟ ಮಾಹಿತಿಯನ್ನು ಕಂದಾಯ, ಕೃಷಿ, ತೋಟಗಾರಿಕೆ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸಿದರಷ್ಟೇ ಬೆಳೆ ಸಮೀಕ್ಷೆ ಅಂತಿಮವಾಗಲಿದೆ. ಪ್ರಕೃತಿ ವಿಕೋಪಗಳಾದಾಗ ನಷ್ಟದ ಸಮೀಕ್ಷೆ, ಬೆಳೆ ವಿಮೆ, ಬೆಂಬಲ ಬೆಲೆಯಡಿ ಖರೀದಿ, ಸಹಾಯಧನ, ಬೆಳೆ ಪರಿಹಾರ ಹೀಗೆ ಎಲ್ಲಕ್ಕೂ ಬೆಳೆ ಸಮೀಕ್ಷೆ ಕಡ್ಡಾಯವಾಗಿದೆ. ನಿಮ್ಮ ಜಮೀನಿನಲ್ಲಿ ಯಾವ ಬೆಳೆ ಬೆಳೆಯಾಗುತ್ತಿದೆ ಎನ್ನುವುದರ ಆಧಾರದ ಮೇಲೆ ಸರ್ಕಾರದ ಯೋಜನೆಗಳು ರೈತರಿಗೆ ಸಿಗಲಿವೆ. ಹೀಗಾಗಿ ಎಲ್ಲ ರೈತರು ತಮ್ಮ ಜಮೀನಿನ ದಾಖಲೆಗಳ ಕಡೆ ಹೇಗೆ ಗಮನಹರಿಸುತ್ತೀರೋ ಹಾಗೇ ಬೆಳೆ ಸಮೀಕ್ಷೆಯನ್ನು ಮಾಡಬೇಕಾದ ಅನಿವಾರ್ಯತೆ ಇದೆ’ ಎಂದು ಮಾಹಿತಿ ನೀಡಿದರು.

ಬೆಳೆ ಸಮೀಕ್ಷೆ ಅಪ್ಲಿಕೇಶನ್‌ ಕುರಿತು ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ, ಕಂದಾಯ ಇಲಾಖೆಯ ಅಧಿಕಾರಿಗಳನ್ನು ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.