ADVERTISEMENT

ಬಸ್, ರೈಲು ನಿಲ್ದಾಣಗಳಲ್ಲಿ ತಪಾಸಣೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 10:52 IST
Last Updated 1 ಏಪ್ರಿಲ್ 2023, 10:52 IST

ಮೈಸೂರು: ‘ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಕಣ್ಗಾವಲು ತಪಾಸಣಾ ಕೇಂದ್ರವನ್ನು ಸ್ಥಾಪಿಸಿ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಚುನಾವಣೆ ಸಂಬಂಧ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಅನುಮಾನಾಸ್ಪದ ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸಬೇಕು’ ಎಂದು ಸೂಚಿಸಿದರು.

‘ಬಸ್‌ಗಳ ಮೇಲೆ ಅಂಟಿಸಿರುವ ಸರ್ಕಾರದ ಯೋಜನೆಗಳ ಜಾಹೀರಾತುಗಳನ್ನು ಕೂಡಲೇ ತೆರವುಗೊಳಿಸಬೇಕು. ನಗರ ಹಾಗೂ ಗ್ರಾಮಾಂತರ ಬಸ್‌ ನಿಲ್ದಾಣಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆದು ಪರಿಶೀಲನೆ ನಡೆಸಬೇಕು. ಕೆಎಸ್ಆರ್‌ಟಿಸಿ ಚಾಲಕರು ಹಾಗೂ ನಿರ್ವಾಹಕರಿಗೆ ಮನವರಿಕೆ ಮಾಡಬೇಕು’ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

‘ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಪರಿಶೀಲನೆಗೆ ಕ್ರಮ ವಹಿಸಬೇಕು. ವಿಮಾನ ನಿಲ್ದಾಣದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ಹೆಲಿಕಾಪ್ಟರ್ ಹಾಗೂ ವಿಮಾನಗಳಲ್ಲಿ ಬರುವವರನ್ನು ಪರಿಶೀಲನೆ ನಡೆಸಬೇಕು’ ಎಂದು ತಿಳಿಸಿದರು.

‘ಚುನಾವಣಾ ಪ್ರಕ್ರಿಯೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರಣಕ್ಕೆ ಮತದಾನದಿಂದ ಯಾರೂ ಹೊರಗುಳಿಯುವಂತಿಲ್ಲ. ತಪ್ಪದೇ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರು ಮತದಾನದಲ್ಲಿ ಭಾಗವಹಿಸುವಂತೆ ಹಾಗೂ ಶೇ 100ರಷ್ಟು ಮತದಾನ ಆಗುವಂತೆ ಕ್ರಮ ವಹಿಸಬೇಕು’ ಎಂದು ಹೇಳಿದರು.

ಮಹಾನಗರ ಪಾಲಿಕೆಯ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪ ವಿಭಾಗಾಧಿಕಾರಿ ಕಮಲಾ ಹಾಗೂ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.