ADVERTISEMENT

ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 1:32 IST
Last Updated 6 ಅಕ್ಟೋಬರ್ 2020, 1:32 IST
ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೋಮವಾರ ಸಂಜೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು
ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೋಮವಾರ ಸಂಜೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು   

ನಂಜನಗೂಡು: ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಸೋಮವಾರ ಸಂಜೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೇಟಿ ನೀಡಿ ದೇವರ ದರ್ಶನ ಪಡೆದು, ಸಂಕಲ್ಪ ಪೂಜೆ, ಅಭಿಷೇಕ ಸೇವೆಗಳಲ್ಲಿ ಪಾಲ್ಗೊಂಡರು.

ದೇವಾಲಯದ ಆಡಳಿತ ಮಂಡಳಿ ವತಿಯಿಂದ ಶ್ವೇತವಸ್ತ್ರ, ಫಲತಾಂಬೂಲ ನೀಡಿ ಗೌರವಿಸಲಾಯಿತು.

ಬಳಿಕ ಕಪಿಲಾ ನದಿ ಸ್ನಾನಘಟ್ಟಕ್ಕೆ ತೆರಳಿ ಅಲ್ಲಿನ ಸ್ಥಿತಿಗತಿಯನ್ನು ವೀಕ್ಷಿಸಿದರು. ದೇವಾಲಯದಲ್ಲಿ ಆಗಬೇಕಾಗಿರುವ ಅಭಿವೃದ್ದಿ ಕೆಲಸ, ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ADVERTISEMENT

ನಗರದ ಸರ್ಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ ತೆರೆದಿರುವ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿ ಕೋವಿಡ್ 19 ಸೋಂಕಿತರ ವಿವರ ಹಾಗೂ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಈಶ್ವರ್ ಕನಾಟ್ಕೆ ಅವರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ, ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮವಹಿಸಲು ಸೂಚಿಸಿದರು.

ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ರೋಹಿಣಿ ಸಿಂಧೂರಿ ಇಲಾಖೆಯ ಪ್ರಗತಿ ಪರಿಶೀಲಿಸಿದರು.

ತಹಶೀಲ್ದಾರ್ ಕೆ.ಎಂ.ಮಹೇಶ್‍ಕುಮಾರ್, ನಗರಸಭೆ ಪೌರಾಯುಕ್ತ ಕರಿಬಸವಯ್ಯ, ದೇವಾಲಯದ ಇ.ಒ ಶಿವಕುಮಾರಯ್ಯ, ಆಗಮಿಕ ನಾಗಚಂದ್ರ ದೀಕ್ಷಿತ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶಶಿರೇಖಾ, ಮಂಜುಳಾ ಮಧು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.