ADVERTISEMENT

ಉತ್ತರ ಪ್ರದೇಶದ ಗೂಂಡಾ ಸರ್ಕಾರ ವಜಾಗೊಳಿಸಲಿ: ಧ್ರುವನಾರಾಯಣ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 8:37 IST
Last Updated 2 ಅಕ್ಟೋಬರ್ 2020, 8:37 IST
ಆರ್. ಧ್ರುವನಾರಾಯಣ
ಆರ್. ಧ್ರುವನಾರಾಯಣ   

ಮೈಸೂರು: ಉತ್ತರ ಪ್ರದೇಶದ ಹಾಥರಸ್‌ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಅತ್ಯಂತ ಹೇಯ ಕೃತ್ಯ. ಇದರಿಂದ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಆರ್‌.ಧ್ರುವನಾರಾಯಣ ಹೇಳಿದರು.

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೂಂಡಾರಾಜ್ಯವಾಗಿ ಬದಲಾಗಿದೆ. ರಾಷ್ಟ್ರಪತಿ ಮಧ್ಯಪ್ರವೇಶಿಸಿ ಅಲ್ಲಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಪರಿಶಿಷ್ಟ ಜಾತಿಯವರ ಮೇಲೆ ನಡೆಯುವ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳಲ್ಲಿ ಉತ್ತರ ಪ್ರದೇಶವು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಎನ್‌ಸಿಆರ್‌ಬಿ ವರದಿ ಹೇಳುತ್ತದೆ. ಇದು ನಾಚಿಕೆಗೇಡಿನ ವಿಷಯ ಎಂದರು.

ADVERTISEMENT

ಘಟನೆ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಒಂದೇ ಒಂದು ಹೇಳಿಕೆ ನೀಡದಿರುವುದು ದುರದೃಷ್ಟಕರ.
ಕಾಂಗ್ರೆಸ್‌ನಿಂದ ದೇಶದಾದ್ಯಂತ ‘ಬಿಜೆಪಿ ಹಠಾವೋ ಭೇಟಿ ಬಚಾವೋ’ ಆಂದೋಲನ ಹಮ್ಮಿಕೊಳ್ಳಲಾಗಿದೆ. ಎಂದು ತಿಳಿಸಿದರು.

ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹೊರಟ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ತಡೆದದ್ದು ಖಂಡನೀಯ. ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿ ಮುಂದುವರಿಯಲು ಬಿಜೆಪಿಗೆ ನೈತಿಕ ಹಕ್ಕು ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಯೋಗಿ ಸರ್ಕಾರ ಸಂಪೂರ್ಣ ವಿಫಲ: ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಉತ್ತರಪ್ರದೇಶದಲ್ಲಿ ಮಹಿಳೆಯರು, ಹಿಂದುಳಿದವರ ಮೇಲೆ ರಾಜಾರೋಷವಾಗಿ ದೌರ್ಜನ್ಯ ನಡೆಯುತ್ತಿದೆ. ಯೋಗಿ ಆದಿತ್ಯನಾಥ್ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.

ಶಾಸಕ ಅನಿಲ್‌ ಕುಮಾರ್, ಕೆಪಿಸಿಸಿ ವಕ್ತಾರ ಎಚ್‌.ಎ.ವೆಂಕಟೇಶ್, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಆರ್‌.ಮೂರ್ತಿ, ಮುಖಂಡರಾದ ಎಂ.ಕೆ.ಸೋಮಶೇಖರ್, ಶಿವಣ್ಣ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.