ADVERTISEMENT

ಲಿಂಗ ಆಧಾರಿತ ತಾರತಮ್ಯ ಮತ್ತು ಹಿಂಸೆ ಮುಂದುವರಿದಿದೆ: ಪ್ರೊ.ಕೆ.ಎಸ್. ಸುರೇಶ್

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 4:01 IST
Last Updated 5 ಆಗಸ್ಟ್ 2025, 4:01 IST
ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ಈಚೆಗೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜೆಎಸ್‌ಎಸ್‌ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಎಸ್. ಸುರೇಶ್ ಅವರೊಂದಿಗೆ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿ
ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ಈಚೆಗೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜೆಎಸ್‌ಎಸ್‌ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಎಸ್. ಸುರೇಶ್ ಅವರೊಂದಿಗೆ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿ   

ಮೈಸೂರು: ‘ಶಿಕ್ಷಣ, ಆರ್ಥಿಕತೆ ಹಾಗೂ ತಂತ್ರಜ್ಞಾನದಲ್ಲಿ ಭಾರತ ಪ್ರಗತಿ ಸಾಧಿಸಿದ್ದರೂ ಲಿಂಗ ಆಧಾರಿತ ತಾರತಮ್ಯ ಮತ್ತು ಹಿಂಸೆ ನಿರಂತರವಾಗಿ ಮುಂದುವರಿದಿದೆ’ ಎಂದು ಜೆಎಸ್‌ಎಸ್‌ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಎಸ್. ಸುರೇಶ್ ವಿಷಾದ ವ್ಯಕ್ತಪಡಿಸಿದರು.

ನಗರದ ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಮಹಿಳಾ ಸಬಲೀಕರಣ ಘಟಕ– ಗರೀಮಾ ವತಿಯಿಂದ ‘ಮಹಿಳಾ ಮತ್ತು ಕಾನೂನು’ ಎಂಬ ವಿಷಯದ ಕುರಿತು ಈಚೆಗೆ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜಕೀಯ, ಸಾಮಾಜಿಕ ಹಾಗೂ ವೈಯಕ್ತಿಕವಾಗಿ ಅನೇಕ ಕ್ಷೇತ್ರಗಳಲ್ಲಿ ಮಹಿಳೆಯರು ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ದೇಶದಲ್ಲಿ ಇಂದಿಗೂ ಪಿತೃ ಪ್ರಧಾನ ಸಮಾಜಕ್ಕೆ ಆದ್ಯತೆ ದೊರೆಯುತ್ತಿದೆ’ ಎಂದರು.

ADVERTISEMENT

‘2017ರಲ್ಲಿ 40 ಸಾವಿರ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಪ್ರತಿ ವರ್ಷ ಸರಾಸರಿ 33ಸಾವಿರ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಶೇ 89ರಷ್ಟು ಮಹಿಳೆಯರು ಲೈಂಗಿಕ ಕಿರುಕುಳ ಎದುರಿಸುತ್ತಿದ್ದಾರೆ. 2ಸಾವಿರ ಹೆಣ್ಮಕ್ಕಳು ಆ್ಯಸಿಡ್‌ ದಾಳಿಗೆ ಒಳಗಾಗುತ್ತಿದ್ದಾರೆ. ಇಂತಹ ಕಿರುಕುಳ ನೀಡುವವರಿಗೆ 20 ವರ್ಷಗಳವರೆಗೆ ಜೈಲು ವಾಸ ಶಿಕ್ಷೆ ವಿಧಿಸಲಾಗುತ್ತದೆ’ ಎಂದು ತಿಳಿಸಿದರು.

‘ದೇಶದಲ್ಲಿ ಇಂದಿಗೂ ಮಾನವ ಕಳ್ಳ ಸಾಗಾಣಿ ನಡೆಯುತ್ತಿರುವುದು ಕಳವಳದ ಸಂಗತಿಯಾಗಿದೆ. ಇದರಲ್ಲಿ ಶೇ 80ರಷ್ಟು ಪ್ರಕರಣಗಳಲ್ಲಿ ಲೈಂಗಿಕ ವ್ಯಾಪಾರಕ್ಕಾಗಿ, ಶೇ 20ರಷ್ಟು ಅಂಗಾಂಗ ವ್ಯಾಪಾರಕ್ಕೆ ಸಂಬಂಧಿಸಿದ್ದೇ ಆಗಿವೆ. ಮಹಿಳೆಯರನ್ನು ರಕ್ಷಿಸುವ ಗುರಿಯನ್ನು ಹೊಂದಿರುವ 34 ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗಿದೆ. ಇಷ್ಟೆಲ್ಲ ಕಾನೂನು ಇದ್ದರೂ ದೌರ್ಜನ್ಯ ನಿಂತಿಲ್ಲ’ ಎಂದರು.

ಮಹಿಳಾ ಸಬಲೀಕರಣ ಘಟಕದ ಸಂಚಾಲಕಿ ಪ್ರೊ.ಚೈತ್ರಾ, ವಾಣಿಜ್ಯ ಮತ್ತು ನಿರ್ವಹಣೆ ವಿಭಾಗದ ಸಂಧ್ಯಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.