
ಮೈಸೂರು: ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ ಹಿಂಪಡೆದು ಹಾಲಿ ಇರುವ ಆಡಳಿತ ಮಂಡಳಿಯನ್ನೇ ಮುಂದುವರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಸದಸ್ಯರು ಜಿಲ್ಲಾ ಪಂಚಾಯಿತಿ ಎದುರು ಶುಕ್ರವಾರ ಪ್ರತಿಭಟಿಸಿದರು.
‘ಗ್ರಾಮ ಪಂಚಾಯಿತಿಗಳ ಆಡಳಿತ ಅಂತಿಮವಾಗಲಿದ್ದು, ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಲು ಸರ್ಕಾರ ಆದೇಶಿಸಿದೆ. ಗ್ರಾಮ ಪಂಚಾಯಿತಿಗಳು ತಳ ಹಂತದ ಗ್ರಾಮಗಳ ಆಡಳಿತ ಕೇಂದ್ರವಾಗಿವೆ. ಸಂವಿಧಾನದ ಆಶಯ ಜಾರಿಗೊಳಿಸುವಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಹಿಂದುಳಿದ ವರ್ಗ, ಶೋಷಿತ ಸಮುದಾಯಗಳು ಹಾಗೂ ಮಹಿಳೆಯರು ರಾಜಕೀಯ ಅಧಿಕಾರ ಬಳಸುವ ಅವಕಾಶ ನೀಡಿದೆ. ಈಗಾಗಲೇ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಸಕಾಲಕ್ಕೆ ಚುನಾವಣೆ ನಡೆಯದೆ 5 ಸಾವಿರಕ್ಕೂ ಹೆಚ್ಚು ಗ್ರಾಮೀಣ ನಾಯಕತ್ವದ ಅವಕಾಶವನ್ನು ಕಸಿದು ಅಧಿಕಾರಶಾಹಿಗಳ ಮೂಲಕ ಆಡಳಿತ ನಡೆಸಲಾಗುತ್ತಿದೆ’ ಎಂದು ದೂರಿದರು.
‘ಆಡಳಿತಾಧಿಕಾರಿ ನೇಮಕ ಮಾಡುವ ಪ್ರಸ್ತಾವ ಕೈಬಿಟ್ಟು, ಗ್ರಾಮ ಪಂಚಾಯಿತಿ ಸದಸ್ಯರ ಆಡಳಿತಾವಧಿ ಮುಗಿದ ನಂತರ ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆಯ ಅಧಿಸೂಚನೆ ಹೊರಡಿಸುವವರೆಗೆ ಹಾಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಸದಸ್ಯರ ಆಡಳಿತ ಮಂಡಳಿಯನ್ನು ಯಥಾವತ್ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.
ಸಂಘಟನೆಯ ಮುಖಂಡರಾದ ಯದುನಾಡು ನಾಗರಾಜು ಎನ್., ಪ್ರಧಾನ ಕಾರ್ಯದರ್ಶಿ ಎಡತೊರೆ ಮಹೇಶ್ ಬಿ.ಕೆ, ರಾಜು ಹುಣಸೂರು, ನಿಶಾಂತ್, ನಂದಕುಮಾರ್, ರಾಮೇಗೌಡ, ರವಿಚಂದ್ರ, ನಟರಾಜು, ಚಂದ್ರಶೇಖರ್, ದಾಕ್ಷಾಯಿಣಿ, ಬೃಂದಾ ಕೃಷ್ಣೇಗೌಡ, ಸೌಮ್ಯಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.