
ಮೈಸೂರು: ‘ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್ ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಎರಡೂವರೆ ವರ್ಷದಿಂದ ಫಲಾನುಭವಿಗಳಿಗೆ ತಲುಪಿಸುತ್ತಿದೆ. ಇದು ಪಾರದರ್ಶಕವಾಗಿ ಮುಂದುವರಿಯುವಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ’ ಎಂದರು.
‘ಪ್ರಾಧಿಕಾರದಿಂದ ಇದುವರೆಗೂ 9 ಸಭೆಗಳನ್ನು ನಡೆಸಲಾಗಿದೆ. ಜಿಲ್ಲೆಯಲ್ಲಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿರುವುದನ್ನು ಗುರುತಿಸಲಾಗಿದೆ’ ಎಂದು ಹೇಳಿದರು.
ಉಪಾಧ್ಯಕ್ಷ ಶಿವಕುಮಾರ್ ಮಾತನಾಡಿ, ‘ಯುವನಿಧಿ ಯೋಜನೆಯಡಿ ನೋಂದಾಯಿಸಿರುವ ನಿರುದ್ಯೋಗಿ ಯುವಕ–ಯುವತಿಯರಿಗೆ ತರಬೇತಿ ನೀಡಿ ಅವರು ಉತ್ತಮ ಕಂಪನಿಗಳಲ್ಲಿ ಕೆಲಸ ಪಡೆದುಕೊಳ್ಳುವಂತೆ ಸಜ್ಜುಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.
ಯುವನಿಧಿ ಯೋಜನೆಗೆ ಪದವಿಯ 14,913 ಮತ್ತು ಡಿಪ್ಲೊಮಾ ಮುಗಿಸಿದ 204 ಅಭ್ಯರ್ಥಿಗಳು ಸೇರಿದಂತೆ ಒಟ್ಟು 15,117 ಮಂದಿ ನೋಂದಾಯಿಸಿದ್ದಾರೆ. ಇದುವರೆಗೆ 24 ಕಂತುಗಳ ಹಣ ಪಾವತಿಯಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 6,96,080 ಫಲಾನುಭವಿಗಳು ನೋಂದಣಿಯಾಗಿದ್ದಾರೆ. ಸೆಪ್ಟೆಂಬರ್ ಅಂತ್ಯದವರೆಗೆ 6,72,538 ಮಂದಿಗೆ ಹಣ ಪಾವತಿಯಾಗಿದ್ದು ಶೇ 97ರಷ್ಟು ಸಾಧನೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಅರ್ಹರಿರುವ ಗ್ರಾಹಕರ ಸಂಖ್ಯೆ 9,67,567. ಇವರಲ್ಲಿ 9,63,342 ಫಲಾನುಭವಿಗಳು ನೋಂದಾಯಿಸಿದ್ದು, ಉಚಿತವಾಗಿ ವಿದ್ಯುತ್ ಪೂರೈಕೆಯ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. 4,225 ಫಲಾನುಭವಿಗಳು ನೋಂದಾಯಿಸುವುದು ಬಾಕಿ ಇದೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 8,14,836 ಪಡಿತರ ಚೀಟಿಗಳಿವೆ. 22,21,714 ಫಲಾನುಭವಿಗಳಿಗೆ ಪಡಿತರ ವಿತರಿಸಲಾಗುತ್ತಿದೆ. ‘ಶಕ್ತಿ’ ಯೋಜನೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ದೊರೆತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷ ಹುಣಸೂರು ಬಸವಣ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.