ADVERTISEMENT

ಕೋವಿಡ್‌ ನಿಯಂತ್ರಣಕ್ಕೆ ಸಹಕರಿಸಿ- ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 14:40 IST
Last Updated 7 ಜನವರಿ 2022, 14:40 IST
ಎಸ್‌.ಟಿ.ಸೋಮಶೇಖರ್‌
ಎಸ್‌.ಟಿ.ಸೋಮಶೇಖರ್‌   

ಮೈಸೂರು: ‘ಕೋವಿಡ್‌ ಸೋಂಕು ಹರಡುವಿಕೆಯು ಜಿಲ್ಲೆಯಲ್ಲೂ ಹೆಚ್ಚುತ್ತಿರುವುದರಿಂದ, ಸೋಂಕಿನ ನಿಯಂತ್ರಣಕ್ಕೆ ಕಠಿಣ ಕ್ರಮ ಅನಿವಾರ್ಯ. ಸರ್ಕಾರದ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮನವಿ ಮಾಡಿದ್ದಾರೆ.

ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು ‘ಕೋವಿಡ್ ನಿಯಂತ್ರಣಾ ಕ್ರಮ ಚುರುಕುಗೊಳಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಈಗಾಗಲೇ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಜ.8, 9ರಂದು ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ’ ಎಂದಿದ್ದಾರೆ.

‘ವಾರಾಂತ್ಯ ಕರ್ಫ್ಯೂವಿನಲ್ಲಿ ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗಿದೆ. ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ’ ಎಂದು ಜಿಲ್ಲಾಡಳಿತದ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ADVERTISEMENT

‘ವಾರಾಂತ್ಯದ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆಯಿಂದ ಚೆಕ್‌ಫೋಸ್ಟ್ ಹಾಕಲಾಗಿದೆ. ಜನರು ಅನಗತ್ಯವಾಗಿ ಸಂಚರಿಸಬಾರದು. ಪೊಲೀಸರು, ಅಧಿಕಾರಿಗಳೊಂದಿಗೆ ಸಹಕರಿಸಬೇಕು’ ಎಂದು ಸೋಮಶೇಖರ್‌ ಮನವಿ ಮಾಡಿದ್ದಾರೆ.

‘ಜಿಲ್ಲೆಯಲ್ಲಿ ಎರಡನೇ ಡೋಸ್ ಲಸಿಕೆ ಹಾಕಿಸುವ ಪ್ರಮಾಣ ಶೇ 100 ತಲುಪಬೇಕು. ರೋಗ ಲಕ್ಷಣ ಕಂಡು ಬಂದಾಕ್ಷಣ ಹೋಂ ಐಸೋಲೇಶನ್‌ನಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳಬಹುದು ಅಥವಾ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಬಹುದು. ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ, ಹಾಸಿಗೆ, ವೆಂಟಿಲೇಟರ್ ಲಭ್ಯತೆ ಸೇರಿದಂತೆ, ಕೋವಿಡ್ ರೋಗಿಗಳ ಚಿಕಿತ್ಸೆಗೆ ಬೇಕಿರುವ ಎಲ್ಲಾ ರೀತಿಯ ಸಿದ್ಧತೆ ಮಾಡಲಾಗಿದೆ. ಸಾರ್ವಜನಿಕರು ಆತಂಕಗೊಳ್ಳುವುದು ಬೇಡ’ ಎಂದಿದ್ದಾರೆ.

‘ಜಿಲ್ಲೆಯಲ್ಲಿ ಸೋಂಕು ಹರಡದಂತೆ ಹೆಚ್ಚಿನ ನಿಗಾ ವಹಿಸುವುದು ಅಗತ್ಯವಾಗಿರುವುದರಿಂದ, ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು’ ಸಚಿವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.