ADVERTISEMENT

ಮೈಸೂರು: ಕೋವಿಡ್‌ ಪರೀಕ್ಷೆ ಹೆಚ್ಚಿಸಲು ಕ್ರಮ

ಪ್ರತಿದಿನ 6,500 ಕೋವಿಡ್‌ ಪರೀಕ್ಷೆ ನಡೆಸುವ ಗುರಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 1:33 IST
Last Updated 5 ಅಕ್ಟೋಬರ್ 2020, 1:33 IST

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ ಹರಡುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ನೂತನ ಕ್ರಮಗಳ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಭಾನುವಾರ ಸಭೆ ನಡೆಯಿತು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದರು.

ಮೈಸೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್‌ ಪರೀಕ್ಷೆ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು.

ADVERTISEMENT

ಜಿಲ್ಲೆಯಲ್ಲಿ ಪ್ರತಿದಿನ 6,500 ಕೋವಿಡ್‌ ಪರೀಕ್ಷೆಗಳನ್ನು ನಡೆಸುವ ಗುರಿ ಇಟ್ಟುಕೊಳ್ಳಲಾಗಿದೆ. 3,900 ಆರ್‌ಟಿ–ಪಿಸಿಆರ್‌ ಹಾಗೂ 2,900 ರ‍್ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗಳನ್ನು ನಡೆಸಬೇಕು. ಇದಕ್ಕಾಗಿ ಅಗತ್ಯವಿರುವ ಸಿಬ್ಬಂದಿ ನೇಮಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾಗಿ ಸಭೆಯಲ್ಲಿ ಪಾಲ್ಗೊಂಡ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿ ಸುತ್ತಿರುವ ವೈದ್ಯಕೀಯ ಸಿಬ್ಬಂದಿ ಪ್ರತಿ ಭಟನೆ ನಡೆಸುತ್ತಿರುವುದರಿಂದ ಕೆಲವು ಕಡೆಗಳಲ್ಲಿ ಕೋವಿಡ್‌ ನಿರ್ವಹಣೆ ಯಲ್ಲಿ ಏರುಪೇರಾಗಿದೆ. ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.

ಮನೆಗಳಲ್ಲೇ ಐಸೊಲೇಷನ್‌ ಆಗಿರುವವರ ಮಾಹಿತಿ ಆ್ಯಪ್‌ಗಳಲ್ಲಿ ಅಪ್‌ಡೇಟ್‌ ಆಗುತ್ತಿಲ್ಲ. ಈ ಸಮಸ್ಯೆ ಸರಿಪಡಿಸುವಂತೆ ತಿಳಿಸಿದರು.

ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ 50 ಬೆಡ್‌ಗಳನ್ನು ಕೊರೊನಾ ಸೋಂಕಿತರಿಗೆ ಮೀಲಿಡುವ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿನ ಶೇ 50 ರಷ್ಟು ಬೆಡ್‌ಗಳನ್ನು ಕೋವಿಡ್‌ಗಾಗಿ ನಿಗದಿಪಡಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.

ಮೈಸೂರು ನಗರದಲ್ಲಿ ಕೋವಿಡ್‌ ಪರೀಕ್ಷೆಗೆ ಈಗ ಇರುವ 25 ಮೊಬೈಲ್‌ ತಂಡಗಳನ್ನು 60ಕ್ಕೆ ಹೆಚ್ಚಿಸುವುದು ಮತ್ತು ಗ್ರಾಮೀಣ ಪ್ರದೇಶಗಳಲ್ಲೂ ಮೊಬೈಲ್‌ ಪರೀಕ್ಷಾ ತಂಡಗಳನ್ನು ಹೆಚ್ಚಿಸಿ, ಅಗತ್ಯ ಸಿಬ್ಬಂದಿ ನೇಮಿಸಲು ನಿರ್ಧರಿಸಲಾಯಿತು.

ಜಿ.ಪಂ ಸಿಇಒ ಡಿ.ಭಾರತಿ, ಪಾಲಿಕೆ ಆಯುಕ್ತ ಗುರುದತ್ತ್ ಹೆಗಡೆ, ಡಿಎಚ್‌ಒ ವೆಂಕಟೇಶ್, ಅಧಿಕಾರಿಗಳು ಪಾಲ್ಗೊಂಡರು.

1,037 ಪ್ರಕರಣ ದೃಢ

ಮೈಸೂರು: ಜಿಲ್ಲೆಯಲ್ಲಿ ಹೊಸದಾಗಿ 1,037 ಮಂದಿಗೆ ಕೋವಿಡ್ ದೃಢ ಪಟ್ಟಿದೆ. ಇದರಿಂದ ಸೋಂಕಿತರ ಒಟ್ಟು ಸಂಖ್ಯೆ 37,328ಕ್ಕೆ ಏರಿಕೆಯಾಗಿದೆ. 316 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,737 ಆಗಿದೆ. ಮತ್ತೆ 12 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 810ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.