
ಮೈಸೂರು: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಬುಧವಾರ ಸಂವಿಧಾನ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಅಲ್ಲಲ್ಲಿ ರಾಷ್ಟ್ರಧ್ವಜಗಳು ಹಾರಿದ್ದು, ಸಂವಿಧಾನದ ಮಹತ್ವವನ್ನು ತಿಳಿಸುವ ಅರ್ಥಪೂರ್ಣ ಕಾರ್ಯಕ್ರಮಗಳು ನಡೆದವು. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತದಿಂದ ಪುರಭವನದಿಂದ ಕಲಾಮಂದಿರದವರೆಗೆ ಆಯೋಜಿಸಿದ್ದ ಸಂವಿಧಾನ ಜಾಗೃತಿ ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು ತಿರಂಗ ಬೀಸುತ್ತಾ ಉತ್ಸಾಹದಿಂದ ಹೆಜ್ಜೆ ಇಟ್ಟರು. ಸಂವಿಧಾನದ ಆಶಯಗಳನ್ನು ಬಿಂಬಿಸುವ ವಿವಿಧ ಫಲಕಗಳನ್ನು ಹಿಡಿದು ನಡೆದರು.
ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಲಾಮಂದಿರದಲ್ಲಿ ನಡೆದ ಸಂವಿಧಾನ ದಿನಾಚರಣೆಯ ವೇದಿಕೆ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಉದ್ಘಾಟಿಸಿದರು. ನೆರೆದವರಿಗೆ ಸಂವಿಧಾನ ಪೀಠಿಕೆ ಬೋಧಿಸಲಾಯಿತು.
‘ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸಮಾನತೆಯ ನ್ಯಾಯ ಕಲ್ಪಿಸಿ ಕೊಡುವುದಕ್ಕೆ ನಮ್ಮ ಸಂವಿಧಾನದಿಂದ ಮಾತ್ರ ಸಾಧ್ಯ. ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ನಾವೆಲ್ಲ ಸಮಾನತೆಯಿಂದ ಬದುಕುವುದು ಸಾಧ್ಯವಾಗಿದೆ. ಅಂಬೇಡ್ಕರ್ ಭಾವಚಿತ್ರವನ್ನು ಪ್ರತಿಯೊಬ್ಬರೂ ಮನೆಗಳಲ್ಲಿ ಹಾಕಿ ಗೌರವಿಸಬೇಕು’ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕಿ ಆರ್.ಎಚ್. ಪವಿತ್ರಾ ಮಾತನಾಡಿದರು.
ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿ.ಪಂ. ಸಿಇಒ ಎಸ್. ಯುಕೇಶ್‌ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ. ರಂಗೇಗೌಡ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್.ಎಚ್. ನಿರ್ಮಲಾ ಇದ್ದರು.
ಪುರಭವನದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನ ಜಾಗೃತಿ ಜಾಥಾಕ್ಕೆ ಶಾಸಕರಾದ ತನ್ವೀರ್ ಸೇಠ್ ಹಾಗೂ ಟಿ.ಎಸ್. ಶ್ರೀವತ್ಸ ಚಾಲನೆ ನೀಡಿದರು.
ಸೆಸ್ಕ್ ಕಚೇರಿ: ವಿಜಯನಗರ 2ನೇ ಹಂತದ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಸಂವಿಧಾನ ಪ್ರಸ್ತಾವನೆಯ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಅಕಾಲಿಕ ಮರಣ ಹೊಂದಿದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸೆಸ್ಕ್ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಪ್ರಧಾನ ವ್ಯವಸ್ಥಾಪಕಿ (ತಾಂತ್ರಿಕ) ಶರಣಮ್ಮ ಎಸ್. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಆಂತರಿಕ ಲೆಕ್ಕ ಪರಿಶೋಧನೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕರಾದ ಎಲ್. ಲೋಕೇಶ್, ರಾಮಸ್ವಾಮಿ ಪಾಲ್ಗೊಂಡರು.
ನೈರುತ್ಯ ರೈಲ್ವೆ: ಮೈಸೂರು ವಿಭಾಗೀಯ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೆಚ್ಚುವರಿ ವಿಭಾಗೀಯ ರೈಲ್ವೆ ನಿರ್ವಾಹಕ ಶಮ್ಮಾಸ್ ಹಮೀದ್ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಂವಿಧಾನದ ಪ್ರಸ್ತಾವನೆಯನ್ನು ಇಂಗ್ಲಿಷ್ ಹಾಗೂ ಹಿರಿಯ ವಾಣಿಜ್ಯ ವ್ಯವಸ್ಥಾಪಕ ಲೋಹಿತೇಶ್ವರ ಕನ್ನಡದಲ್ಲಿ ಬೋಧಿಸಿದರು.
‘ಭ್ರಷ್ಟ ವ್ಯವಸ್ಥೆಗೆ ಕಡಿವಾಣ ಹಾಕಿ’
ಮೈಸೂರು: ‘ಭ್ರಷ್ಟಾಚಾರ ವ್ಯವಸ್ಥೆಗೆ ಕಡಿವಾಣ ಹಾಕಲು ಯುವಕರು ಗಟ್ಟಿಯಾಗಿ ನಿಲ್ಲಬೇಕು’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದರು. ಮಾನಸ ಗಂಗೋತ್ರಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ ಮೈಸೂರು ವಿವಿ ಕಾನೂನು ಶಾಲೆ ವತಿಯಿಂದ ಸ್ಕೂಲ್ ಆಫ್ ಪ್ಲಾನಿಂಗ್ ಆರ್ಕಿಟೆಕ್ಚರ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ‘ಭಾರತದ ಸಂವಿಧಾನ ಮತ್ತು ಸಮಕಾಲೀನ ಸಮಾಜ’ಕುರಿತು ಉಪನ್ಯಾಸ ನೀಡಿದರು. ‘ಉನ್ನತ ಹುದ್ದೆಗಳಿಗೆ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತಿದೆ. ಆದರೆ ರಾಜಕಾರಣಗಳು ಮಾತ್ರ ಯಾವುದೇ ಪರೀಕ್ಷೆ ಇಲ್ಲದೇ ಜನರಿಗೆ ಆಮಿಷಯೊಡ್ಡಿ ಅಧಿಕಾರಕ್ಕೆ ಬರುತ್ತಾರೆ. ಉತ್ತಮ ಚಾರಿತ್ರ್ಯಯುಳ್ಳವರನ್ನು ಆಯ್ಕೆ ಮಾಡಿದರೆ ದೇಶ ಹಾಗೂ ರಾಜ್ಯ ಎರಡು ಸುಭಿಕ್ಷವಾಗಿರುತ್ತದೆ’ ಎಂದರು. ಮೈಸೂರು ವಿ.ವಿ. ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಉದ್ಘಾಟಿಸಿದರು. ಕುಲಸಚಿವೆ ಎಂ.ಕೆ. ಸವಿತಾ ಮೈಸೂರು ವಿವಿ ಕಾನೂನು ಶಾಲೆ ನಿರ್ದೇಶಕ ಪ್ರೊ. ಟಿ.ಆರ್. ಮಾರುತಿ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ನಿರ್ದೇಶಕ ಪ್ರೊ.ಎಸ್. ನರೇಂದ್ರ ಕುಮಾರ್ ಪ್ರೊ.ಸೋಮಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.