
ಮೀಸಲಾತಿ (ಸಾಂಕೇತಿಕ ಚಿತ್ರ)
ಪಿರಿಯಾಪಟ್ಟಣ: ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಮುಂದಿನ ವರ್ಷ ಜನವರಿ ಮತ್ತು ಫೆಬ್ರುವರಿಯಲ್ಲಿ ಮುಗಿಯಲಿದ್ದು, ಸಕಾಲದಲ್ಲಿ ಚುನಾವಣೆ ನಡೆಸಲು ಅನುವಾಗುವಂತೆ ಅಂತಿಮ ಮೀಸಲು ಅಧಿಸೂಚನೆ ಹೊರಡಿಸಬೇಕೆಂದು ರಾಜ್ಯ ಗ್ರಾ. ಪಂ. ಸದಸ್ಯರ ಮಹಾ ಒಕ್ಕೂಟದ ಮೈಸೂರು ಜಿಲ್ಲಾ ಉಪಾಧ್ಯಕ್ಷ ರವಿಚಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ 5,950 ಗ್ರಾ.ಪಂ. ಗಳಿಗೆ 2020 ಡಿಸೆಂಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆದಿತ್ತು. ಅವುಗಳ ಅವಧಿ 2026ರ ಜನವರಿ ಮತ್ತು ಫೆಬ್ರುವರಿ ತಿಂಗಳಲ್ಲಿ ಮುಕ್ತಾಯವಾಗಲಿದೆ. ಮುಂದಿನ ಅವಧಿಗೆ ಹೊಸದಾಗಿ ಚುನಾವಣೆ ನಡೆಸಬೇಕಾದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆದೆ 1993 ಸೆಕ್ಷನ್ 5(5)ರ ಅನ್ವಯ ಮೀಸಲು ನಿಗದಿಯಾಗಬೇಕು ಎಂದರು.
ಗ್ರಾ.ಪಂ.ಗಳಿಗೆ ಮೀಸಲು ನಿಗದಿಪಡಿಸಬೇಕಾಗಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಅದೇ ರೀತಿ ಚುನಾವಣೆ ನಡೆಸುವುದು ರಾಜ್ಯ ಚುನಾವಣಾ ಆಯೋಗದ ಹೊಣೆಗಾರಿಕೆಯಾಗಿದ್ದು, ಮೀಸಲು ಅಂತಿಮಗೊಳ್ಳುವವರೆಗೆ ಚುನಾವಣಾ ದಿನಾಂಕ ಘೋಷಿಸಲು ಸಾಧ್ಯವಿಲ್ಲ, ಎಂದು ಈಗಾಗಲೇ ಆಯೋಗ ಹೇಳಿದೆ. ಒಟ್ಟು ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸದ ಹೊರತು ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ಸಾಧ್ಯವಿಲ್ಲ. ಈಗಾಗಲೇ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಐದು ವರ್ಷಗಳಿಂದ ಚುನಾವಣೆ ನಡೆದಿಲ್ಲ, ಈಗ ಗ್ರಾಮ ಪಂಚಾಯಿತಿ ಚುನಾವಣೆಯು ಸಹ ಅದೇ ಹಾದಿ ಹಿಡಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸಕಾಲದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುಲು ಸರ್ಕಾರ ಅನುವು ಮಾಡಿಕೊಡಬೇಕು, ಇಲ್ಲದಿದ್ದರೆ ಸಂವಿಧಾನದ 74ನೇ ತಿದ್ದುಪಡಿಯ ಆಶಯಕ್ಕೆ ವಿರುದ್ಧವಾಗಿರುತ್ತದೆ. ಈಗಾಗಲೇ ನಮ್ಮ ಸಂಘದ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರುಗಳು ಗ್ರಾಮ ಪಂಚಾಯಿತಿ ಸದಸ್ಯರ ಮೀಸಲಾತಿ ಅಂತಿಮಗೊಳಿಸುವಂತೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದು, ಆದಷ್ಟು ಬೇಗ ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಸಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.