ಮೈಸೂರು: ‘ಕುರುಬ ಸಮುದಾಯಕ್ಕೆ ಸೇರಿದ ಒಬ್ಬರನ್ನೂ ಸಿದ್ದರಾಮಯ್ಯ ಬೆಳೆಸಲಿಲ್ಲ. ನೆಪ ಮಾತ್ರಕ್ಕೆ ತಾತ್ಕಾಲಿಕವಾಗಿ ಕೆಲವರನ್ನಷ್ಟೇ ಸಚಿವರನ್ನಾಗಿ ಮಾಡಿದರೇ ಹೊರತು ಪೂರ್ಣಾವಧಿಯಲ್ಲಿ ಯಾರಿಗೂ ಸಚಿವ ಸ್ಥಾನ ನೀಡಲಿಲ್ಲ’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು.
ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಮೇತರಾಗಿ ಗುರುವಾರ ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಬಂದು ಪೂಜೆ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ಬಾರಿ ಬಿಜೆಪಿಯಿಂದ ರಾಷ್ಟ್ರವಾದಿಯನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ’ ಎಂದು ತಿಳಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತದೆ. ಆಗ ಜಾತಿ ವಿಚಾರ ಬರುವುದಿಲ್ಲ. ರಾಷ್ಟ್ರವಾದಿಯೊಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಗರು ಬಯಸಿದ್ದರು. ಆದರೆ ಸಚಿವನೂ ಆಗುವುದಿಲ್ಲ ಅಂತ ಬಿಂಬಿಸಲಾಗಿತ್ತು. ಹೈಕಮಾಂಡ್ ನನ್ನನ್ನು ಹೇಗೆ ಪರಿಗಣಿಸಿದೆ ಅಂತ ಈಗ ಎಲ್ಲರಿಗೂ ಗೊತ್ತಾಗಿದೆ ಎಂದರು.
ಬಸವರಾಜ ಬೊಮ್ಮಾಯಿ ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರೇ ಹಸಿವಿನಿಂದ ಒದ್ದಾಡುತ್ತಿರುವ ಇಲಿ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಹುಲಿಯಾಗುತ್ತಾರೆ ಅಂದುಕೊಂಡಿದ್ದೆವು. ಆದರೆ ಅವರು ಇಲಿಯಾಗಿ ವಿಲ ವಿಲ ಒದ್ದಾಡುತ್ತಿದ್ದಾರೆ. ಅವರು ರಾಜ್ಯಕ್ಕೆ ಹುಲಿಯಾಗುವ ಬದಲು ಡಿ.ಕೆ.ಶಿವಕುಮಾರ್ ಮೇಲೆ ಹುಲಿಯಾಗಿದ್ದಾರೆ ಎಂದು ಚಾಟಿ ಬೀಸಿದರು.
ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ಅಡ್ಡಿಯಾಗುತ್ತಾರೆಂದು ಸೋಲಿಸಿದರು. ಈ ಮಾತನ್ನು ನಾನು
ಚಾಮುಂಡಿ ಬೆಟ್ಟದಲ್ಲಿ ನಿಂತು ಹೇಳುತ್ತಿದ್ದೇನೆ ಎಂದರು.
ಈಗ ಬಿಜೆಪಿ ಸರ್ಕಾರದಲ್ಲಿ ಹಿಂದುಳಿದವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಪೂರ್ಣ ಬಹುಮತದಿಂದ ಪಕ್ಷ ನಿಷ್ಠ ಕಾರ್ಯಕರ್ತರೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ... ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಮನೆ, ಕಚೇರಿ ಮೇಲೆ ಐ.ಟಿ ದಾಳಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.