ADVERTISEMENT

ಸಿದ್ದರಾಮಯ್ಯ ಕೆಳಗಿಳಿಸಲು ಕಾರಣಗಳಿಲ್ಲ, ಅವರೇ ಮುಂದುವರಿಯುತ್ತಾರೆ: ಯತೀಂದ್ರ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 10:53 IST
Last Updated 27 ನವೆಂಬರ್ 2025, 10:53 IST
<div class="paragraphs"><p>ಸಿದ್ದರಾಮಯ್ಯ ಮತ್ತು ಯತೀಂದ್ರ ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ ಮತ್ತು ಯತೀಂದ್ರ ಸಿದ್ದರಾಮಯ್ಯ

   

ಮೈಸೂರು: ‘ಸಿದ್ದರಾಮಯ್ಯ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರುತ್ತಾರೆ. ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಯಾವ ಕಾರಣಗಳೂ ಇಲ್ಲ’ ಎಂದು ಅವರ ಪುತ್ರ, ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರ ಮೇಲೆ ಯಾವ ಆರೋಪವೂ ಇಲ್ಲ. ಹೀಗಿರುವಾಗ ನಾಯಕತ್ವ ಬದಲಾವಣೆ ಚರ್ಚೆಯೇ ಬರಬಾರದಿತ್ತು. ಆದರೂ ಕೆಲವರು ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದರು.

ADVERTISEMENT

‘ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇವೆ ಎಂದು ಹೈಕಮಾಂಡ್‌ ಒಮ್ಮೆಯೂ ಹೇಳಿಲ್ಲ. ಆದರೂ ಹೈಕಮಾಂಡ್ ತೀರ್ಮಾನವೇ ಅಂತಿಮ. ಉಳಿದ ಎರಡೂವರೆ ವರ್ಷವೂ ತಂದೆಯೇ ಮುಖ್ಯಮಂತ್ರಿ ಆಗಿರುತ್ತಾರೆ ಎಂಬ ವಿಶ್ವಾಸ ನನಗಿದೆ’ ಎಂದು ಹೇಳಿದರು.

‘ನನಗಿರುವ ಮಾಹಿತಿ ಪ್ರಕಾರ, ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ. ಸಿದ್ದರಾಮಯ್ಯ ಅವರಾಗಲಿ, ಕೆಲ ಹಿರಿಯ ಸಚಿವರಾಗಲಿ ಆ ಬಗ್ಗೆ ಯಾವತ್ತೂ ಮಾತನಾಡಿಯೇ ಇಲ್ಲ. ಅಂದರೆ ಅಧಿಕಾರ ಹಂಚಿಕೆಯ ಮಾತುಕತೆ ನಡೆದಿಲ್ಲವೆಂದೇ ಅರ್ಥ ತಾನೆ?’ ಎಂದರು.

‘ಯಾರಿಗೆ ಎಷ್ಟು ಶಾಸಕರ ಬೆಂಬಲವಿದೆ ಎನ್ನುವ ಚರ್ಚೆ ಬೇಡ. ಅದು ನಮ್ಮ ಪಕ್ಷದ ಆಂತರಿಕ ವಿಚಾರ. ಎಲ್ಲಾ ಶಾಸಕರ ಬೆಂಬಲ ಸಿದ್ದರಾಮಯ್ಯ ಅವರಿಗಿದೆ’ ಎಂದು ಹೇಳಿದರು.

‘ಡಿ.ಕೆ. ಶಿವಕುಮಾರ್‌ ಅವರನ್ನು ಸಿಎಂ ಮಾಡಬೇಕು’ ಎಂಬ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಯತೀಂದ್ರ, ‘ಯಾರನ್ನು ಸಿಎಂ ಮಾಡಬೇಕು, ಮಾಡಬಾರದು ಎಂಬುದು ನಮ್ಮ ಪಕ್ಷದ ಆಂತರಿಕ ವಿಚಾರ. ಅದು ನಮ್ಮ ಶಾಸಕರು ಮತ್ತು ಹೈಕಮಾಂಡ್‌ಗೆ ಬಿಟ್ಟಿದ್ದು. ಆ ಬಗ್ಗೆ ಬೇರೆಯವರ ಅಭಿಪ್ರಾಯ ಅನಗತ್ಯ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.