ADVERTISEMENT

ಕಾಂಗ್ರೆಸ್‌ ಸರ್ಕಾರದಲ್ಲಿನ ಟೆಂಡರ್‌ ತನಿಖೆಯೂ ನಡೆಯಲಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 10:00 IST
Last Updated 27 ನವೆಂಬರ್ 2021, 10:00 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಮೈಸೂರು: ‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಟೆಂಡರ್‌ಗಳ ಬಗ್ಗೆಯೂ ತನಿಖೆ ನಡೆಯಲಿ. ನಮ್ಮ ಆಕ್ಷೇಪ ಏನೂ ಇಲ್ಲ‌’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಅವರು ಯಾವುದೇ ಪಕ್ಷದವರಾಗಿರಲಿ’ ಎಂದು ಮುಖ್ಯಮಂತ್ರಿಗೆ ಹೇಳಿಕೆಗೆ ತಿರುಗೇಟು ನೀಡಿದರು.

‘ರಾಜ್ಯ ಸರ್ಕಾರದ ವಿರುದ್ಧ ಶೇ 40 ಕಮಿಷನ್‌ ಆರೋಪ ಮಾಡಿರುವುದು ನಾನಲ್ಲ. ಗುತ್ತಿಗೆದಾರರ ಸಂಘ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದೆ. ಈ ವಿಚಾರ ಮೊದಲು ಪ್ರಜಾವಾಣಿ ಹಾಗೂ ಡೆಕ್ಕನ್‌ ಹೆರಾಲ್ಡ್‌ನಲ್ಲಿ ಪ್ರಕಟವಾಗಿದೆ. ಸಂಘದ ಅಧ್ಯಕ್ಷ ಕೆಂಪ‍ಣ್ಣ ಪತ್ರಿಕಾಗೋಷ್ಠಿ ಕೂಡ ನಡೆಸಿ ವಿಚಾರ ತಿಳಿಸಿದ್ದಾರೆ. ಈ ಹೇಳಿಕೆ ಆಧರಿಸಿ ನಾನು ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇನೆ. ಮೋದಿ ಪ್ರಾಮಾಣಿಕರಾಗಿದ್ದರೆ ರಾಜ್ಯ ಸರ್ಕಾರವನ್ನು ವಜಾ ಮಾಡಲಿ’ ಎಂದು ಆಗ್ರಹಿಸಿದರು.

ADVERTISEMENT

‘ಯಾವ ಇಲಾಖೆ ವಿರುದ್ಧ ಭ್ರಷ್ಟಾಚಾರದ ಆರೋಪ ಇದೆಯೋ ಅದೇ ಇಲಾಖೆಯ ಅಧಿಕಾರಿಗಳನ್ನು ತನಿಖೆಗೆ ನೇಮಿಸಿದರೆ ಹೇಗೆ? ಇದೊಂದು ಕಣ್ಣೊರೆಸುವ ತಂತ್ರ. ಇದರಿಂದ ಸತ್ಯ ಹೊರಬರಲು ಸಾಧ್ಯವೇ? ಪರ್ಸೆಂಟೇಜ್‌ ತೆಗೆದುಕೊಂಡಿಲ್ಲ ಎಂದಾದರೆ ಕಾರ್ಯದರ್ಶಿಯಿಂದ ತನಿಖೆ ಮಾಡಿಸುವುದಾಗಿ ಮುಖ್ಯಮಂತ್ರಿ ಏಕೆ ಹೇಳಬೇಕಿತ್ತು‌’‌ ಎಂದು ಪ್ರಶ್ನಿಸಿದರು.

ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲೇ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮತ್ತೊಮ್ಮೆ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.