ADVERTISEMENT

ಮಳವಳ್ಳಿಯಲ್ಲಿ ಪಕ್ಷಾಂತರ ಜೋರು: ಜೆಡಿಎಸ್‌, ಕಾಂಗ್ರೆಸ್‌, ಬಿಜೆಪಿಗೆ ಮುಖಂಡರ ವಲಸೆ

ಬಲವರ್ಧನೆಗೆ ಮೂರು ಪಕ್ಷಗಳ ಮುಖಂಡರ ಕಸರತ್ತು

ಟಿ.ಕೆ.ಲಿಂಗರಾಜು
Published 19 ಡಿಸೆಂಬರ್ 2020, 1:54 IST
Last Updated 19 ಡಿಸೆಂಬರ್ 2020, 1:54 IST
ಮಳವಳ್ಳಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ್ ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು
ಮಳವಳ್ಳಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ್ ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು   

ಮಳವಳ್ಳಿ: ತಾಲ್ಲೂಕಿನಲ್ಲಿ ಗ್ರಾಮ ಪಂಚಾ ಯಿತಿ ಚುನಾವಣೆಯ ಚಟುವಟಿಕೆ ಬಿರುಸು ಪಡೆಯುತ್ತಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ರಾಜಕೀಯ ನೆಲೆಗಾಗಿ ಸದ್ದಿಲ್ಲದೆ ಪಕ್ಷಾಂತರ ಪರ್ವದಲ್ಲಿ ತೊಡಗಿದ್ದಾರೆ.

ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳಿಗೆ ಡಿ.22ರಂದು ಚುನಾವಣೆ ನಡೆಯಲಿದ್ದು, ಚುನಾವಣೆ ಮುನ್ನವೇ ವಿವಿಧ ಕಾರಣಗಳಿಂದ ಮೂರೂ ಪಕ್ಷಗಳಲ್ಲಿನ ಕೆಲ ಮುಖಂಡರು ಪಕ್ಷಾಂತರ ಮಾಡುವ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್‌ನಿಂದ ದೂರವಾಗಿರುವ ಕಿರುಗಾವಲು ಹೋಬಳಿಯ ಜಿಲ್ಲಾ ಪಂಚಾಯಿತಿ ಸದಸ್ಯರೊಬ್ಬರು ಮಾತೃ ಪಕ್ಷ ಜೆಡಿಎಸ್‌ನತ್ತ ಒಲವು ಹೆಚ್ಚಿಸಿಕೊಂಡಿದ್ದಾರೆ. ಈಗಾಗಲೇ ಶಾಸಕ ಡಾ.ಕೆ.ಅನ್ನದಾನಿ ಅವರ ಜತೆ ಓಡಾಡುತ್ತಿದ್ದು, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

ADVERTISEMENT

ತಾಲ್ಲೂಕು ಪಂಚಾಯಿತಿ ಅಧ್ಯಕ್ಷರ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ್ದ ಕಾಂಗ್ರೆಸ್‌ನ ಇಬ್ಬರು ಹಾಗೂ ಜೆಡಿಎಸ್‌ನ ಒಬ್ಬ ಸದಸ್ಯ ರಾಜಕೀಯ ಅಸ್ತಿತ್ವಕ್ಕಾಗಿ ಹೋರಾಟ ನಡೆಸುವ ಅನಿವಾರ್ಯ ಎದುರಾಗಿದೆ. ತಾಲ್ಲೂಕು ಪಂಚಾಯಿತಿಯ 3-4 ಮಾಜಿ ಸದಸ್ಯರು ಸೇರಿದಂತೆ ಸ್ಥಳೀಯ ಜೆಡಿಎಸ್ ಮುಖಂಡರು ಕಾಂಗ್ರೆಸ್‌ ಸೇರುತ್ತಿದ್ದಾರೆ. ಆ ಮೂಲಕ ಪಕ್ಷ ಬಲವರ್ಧನೆಗೆ ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಮುಂದಾಗಿದ್ದಾರೆ.

ಕಾಂಗ್ರೆಸ್‌ನಲ್ಲಿ ಅಸಮಾಧಾನ ಗೊಂಡಿರುವ ಕೆಲ ಮುಖಂಡರೂ ಜೆಡಿಎಸ್‌ನ ಮುಖಮಾಡಿದ್ದಾರೆ. ಸಂಘಟನೆ ಚುರುಕುಗೊಳಿಸಿರುವ ಬಿಜೆಪಿ ಎರಡೂ ಪಕ್ಷಗಳಲ್ಲಿ ಅಸಮಾಧಾನ ಗೊಂಡಿರುವ ಮುಖಂಡರನ್ನು ಸೆಳೆಯಲು ಮುಂದಾಗಿದೆ. ಮುಂದೆ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿದೆ.

ತಾಲ್ಲೂಕಿನಲ್ಲಿ ಕೃಷಿ ಪತ್ತಿನ ಸಹಕಾರ ಸಂಘ, ಎಂಡಿಸಿಸಿ ಬ್ಯಾಂಕ್ ಮತ್ತು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಸ್ತಿತ್ವವನ್ನು ಭದ್ರಪಡಿಸಿಕೊಳ್ಳಲು ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ವಿವಿಧ ಪಕ್ಷಗಳ ಮುಖಂಡರನ್ನು ಸೇರ್ಪಡೆ ಮಾಡಿಕೊಳ್ಳುತ್ತಿದೆ. ಪಿಎಲ್‌ಡಿ ಬ್ಯಾಂಕ್ ಮತ್ತು ಪುರಸಭೆಯಲ್ಲಿ ಅಧಿಕಾರದಲ್ಲಿ ಇರುವ ಜೆಡಿಎಸ್ ಪಕ್ಷವನ್ನು ಸದೃಢಗೊಳಿಸಲು ಶಾಸಕ ಡಾ.ಕೆ.ಅನ್ನದಾನಿ ಅವರು ಜಿ.ಪಂ.ಸದಸ್ಯರೊಬ್ಬರನ್ನು ಸೆಳೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.