ಮೈಸೂರು: ‘ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಂದ ನೆರವೇರಿಸಲು ನಿರ್ಧಾರ ಕೈಗೊಳ್ಳಬೇಕು’ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಸರ್ಕಾರವನ್ನು ಒತ್ತಾಯಿಸಿದ್ದಾರೆ.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ದಸರಾ ಉನ್ನತ ಸಮಿತಿ ಸಭೆಯಲ್ಲಿ ಈ ವಿಷಯ ಮಂಡಿಸಿದ್ದೇನೆ. ಕಾಡಾ ಕಚೇರಿ ಆವರಣದಲ್ಲಿ ಸರ್ಕಾರಿ ಸ್ವಾಮ್ಯದ ಮಳಿಗೆಗಳನ್ನು ತೆರೆಯಬೇಕು. ಅಲ್ಲಿ ಮೈಸೂರು ರೇಷ್ಮೆ ಸೀರೆ, ಶ್ರೀಗಂಧದ ಉತ್ಪನ್ನ, ನಂಜನಗೂಡು ರಸಬಾಳೆ, ವೀಳ್ಯದೆಲೆ ಮೊದಲಾದವು ದೊರೆಯುವಂತೆ ಮಾಡಬೇಕು ಎಂದು ಕೋರಿದ್ದೇನೆ’ ಎಂದು ಮಾಹಿತಿ ನೀಡಿದ್ದಾರೆ.
‘ಯೋಗ ದಸರಾ ಕಾರ್ಯಕ್ರಮವನ್ನು ದಾಖಲೆ ಆಗುವಂತೆ ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕು. ದಸರಾ ದಿನಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಬರುವ ಪ್ರವಾಸಿಗರ ಹಾಗೂ ಸಾರ್ವಜನಿಕರಿಗೆ ಪಾರ್ಕಿಂಗ್ ಮತ್ತು ಚಪ್ಪಲಿ ಸ್ಟಾಂಡ್‌ನಲ್ಲಿ ಶುಲ್ಕದಿಂದ ವಿನಾಯಿತಿ ಕೊಡಬೇಕು ಎಂದು ಮನವಿ ಮಾಡಿದ್ದೇನೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.