ADVERTISEMENT

ಚಾಮರಾಜನಗರ ದುರಂತಕ್ಕೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿಯೇ ಕಾರಣ: ಮರಿತಿಬ್ಬೇಗೌಡ

​ಪ್ರಜಾವಾಣಿ ವಾರ್ತೆ
Published 4 ಮೇ 2021, 3:44 IST
Last Updated 4 ಮೇ 2021, 3:44 IST
ಮರಿತಿಬ್ಬೇಗೌಡ
ಮರಿತಿಬ್ಬೇಗೌಡ   

ಮೈಸೂರು: ‘ಚಾಮರಾಜನಗರದಲ್ಲಿ, ಆಮ್ಲಜನಕದ ಕೊರತೆಯಿಂದ ಕೋವಿಡ್ ರೋಗಿಗಳು ಮೃತಪಟ್ಟ ಘಟನೆಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಿರ್ಲಕ್ಷ್ಯತೆ ಮತ್ತು ಬೇಜವಾಬ್ದಾರಿತನವೇ ಕಾರಣವಾಗಿದೆ. ಅವರನ್ನು ಅಮಾನತುಗೊಳಿಸಿ, ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದ್ದಾರೆ.

‘ಮೇ 2ರ ಬೆಳಿಗ್ಗೆ ಮೈಸೂರು ಜಿಲ್ಲಾಧಿಕಾರಿ, ಚಾಮರಾಜನಗರ ಜಿಲ್ಲೆಗೆ ಆಮ್ಲಜನಕ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ ವಿಷಯ ಗಮನಕ್ಕೆ ಬಂದಿತು. ಕೂಡಲೇ ರಾಜ್ಯದ ಕೋವಿಡ್ ನೋಡಲ್ ಅಧಿಕಾರಿಗಳಾದ ನಿಶ್ಚಿತ್ ಮತ್ತು ಗುಂಜಾಲ್ ಕೃಷ್ಣ ಅವರಿಗೆ ವಿಷಯ ತಿಳಿಸಿದೆ.ಬೆಳಿಗ್ಗೆ 11 ಗಂಟೆ ಒಳಗೆ ಆಮ್ಲಜನಕವು ಚಾಮರಾಜನಗರ ಜಿಲ್ಲೆಗೆ ತಲುಪದೇ ಇದ್ದರೆ ತುಂಬಾ ಸಂಕಷ್ಟ ಪರಿಸ್ಥಿತಿ ಎದುರಾಗಿ, ಸೋಂಕಿತರಿಗೆ ಬಹಳ ತೊಂದರೆಯಾಗುವುದರಿಂದ ಮೈಸೂರು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲು ಮನವಿ ಮಾಡಿದ್ದೆ.ಮೈಸೂರು ಜಿಲ್ಲಾಧಿಕಾರಿಯು, ನಿರ್ದೇಶನವನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ನಿಶ್ಚಿತ್ ಹೇಳಿದರು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಸಹ ಮೈಸೂರು ಜಿಲ್ಲಾಧಿಕಾರಿಯ ಅಸಹಕಾರ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು, ರೋಹಿಣಿ ಸಿಂಧೂರಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT

ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.