ADVERTISEMENT

ಮೈಸೂರಿನಲ್ಲಿ ಸುಳ್ಳು ಸುದ್ದಿಗಳದ್ದೇ ಸಾಮ್ರಾಜ್ಯ

ದೂರು ದಾಖಲಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2020, 12:09 IST
Last Updated 15 ಮಾರ್ಚ್ 2020, 12:09 IST

ಮೈಸೂರು: ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ನೀಡಿದ್ದಾರೆ.

ತಿ.ನರಸೀಪುರ ತಾಲ್ಲೂಕಿನ ಕೆಲವರು ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಸಂದೇಶವನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದರು. ಇದಕ್ಕೆ ಆ ವ್ಯಕ್ತಿಯು ಪ್ರತಿಕ್ರಿಯಿಸಿ ಇದು ತಪ್ಪು ಸಂದೇಶ, ತಮಾಷೆಗೆ ಸ್ನೇಹಿತರು ಮಾಡಿದ್ದಾರೆ ಎಂದು ಸ್ಪಷ್ಟನೆಯನ್ನೂ ಕೊಟ್ಟಿದ್ದರು. ಇದರ ವಿರುದ್ಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್ ಪೊಲೀಸರಿಗೆ ದೂರು ನೀಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ನಂಜನಗೂಡು ತಾಲ್ಲೂಕಿನ ಯುವತಿಯೊಬ್ಬರಿಗೆ ಕೊರೊನಾ ಸೋಂಕು ಇದೆ ಎಂದು ಫೇಸ್‌ಬುಕ್‌ನಲ್ಲಿ ಹಾಕಿದ್ದ ಇಬ್ಬರನ್ನು ಚಾಮರಾಜನಗರ ಪೊಲೀಸರು ಬಂಧಿಸಿದ್ದರು.

ADVERTISEMENT

ಈ ಮಧ್ಯೆ ‘ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿರುವ ಟಿಬೆಟೆನ್‌ಗಳನ್ನು ಭೇಟಿ ಮಾಡಿದರೆ, ಅವರ ಸಮೀಪ ಸುಳಿದಾಡಿದರೆ ಕೊರೊನಾ ಬರುತ್ತದೆ. ಹಾಗಾಗಿ, ಅವರಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ’ ಎಂಬ ಸಂದೇಶವೂ ವಾಟ್ಸ್‌ಆ್ಯಪ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಸಂದೇಶ ಸುಳ್ಳು ಎಂದು ಸ್ಪಷ್ಟಪಡಿಸಿರುವ ಪೊಲೀಸರು ಇಂತಹ ಸಂದೇಶ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ‘ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗುವುದು. ಯಾರೂ ಸುಳ್ಳು ಸುದ್ದಿ ಹರಡಬಾರದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.