ADVERTISEMENT

ಮೈಸೂರು| ಖಾಸಗಿ ಆಸ್ಪತ್ರೆಯಲ್ಲಿಲ್ಲ ಹೊರ ರೋಗಿ ಸೇವೆ

ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಇರಲಿದೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2019, 10:32 IST
Last Updated 8 ನವೆಂಬರ್ 2019, 10:32 IST
ಅಖಿಲ ಭಾರತ ವೈದ್ಯಕೀಯ ಸಂಘದ ಮೈಸೂರು ಶಾಖೆಯ ಪ್ರತಿನಿಧಿಗಳು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರನ್ನು ಗುರುವಾರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು
ಅಖಿಲ ಭಾರತ ವೈದ್ಯಕೀಯ ಸಂಘದ ಮೈಸೂರು ಶಾಖೆಯ ಪ್ರತಿನಿಧಿಗಳು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರನ್ನು ಗುರುವಾರ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು   

ಮೈಸೂರು: ಬೆಂಗಳೂರಿನ ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ನ. 1ರಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೇವಾನಿರತ ಸ್ನಾತಕೋತ್ತರ ಮಹಿಳಾ ವೈದ್ಯ ವಿದ್ಯಾರ್ಥಿಗಳ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಹಾಗೂ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘದ ಮೈಸೂರು ಶಾಖೆ ನ. 8ರಂದು ಹೊರರೋಗಿ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

8ರ ಬೆಳಿಗ್ಗೆ 6ರಿಂದ 9ರ ಬೆಳಿಗ್ಗೆ 6 ಗಂಟೆಯವರೆಗೆ 24 ಗಂಟೆಗಳ ಕಾಲ ಎಲ್ಲ ಖಾಸಗಿ ಆಸ್ಪತ್ರೆಗಳು, ನರ್ಸಿಂಗ್‌ ಹೋಂಗಳು ಹಾಗೂ ಕ್ಲಿನಿಕ್‌ಗಳಲ್ಲಿ ಹೊರರೋಗಿ ಸೇವೆಗಳನ್ನು ಸ್ಥಗಿತಗೊಳಿಸಲು ಸಂಘವು ಕರೆ ನೀಡಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಂಘದ ಮೈಸೂರು ಶಾಖೆಯ ಅಧ್ಯಕ್ಷ ಡಾ.ಸುರೇಶ್‌ ರುದ್ರಪ್ಪ, ‘ಇದೊಂದು ಅಮಾನವೀಯ ಘಟನೆ. ಇಂತಹ ಘಟನೆಗಳಿಂದ ವೈದ್ಯರು ದೇಶ ತೊರೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ನಿರ್ಭೀತಿಯಿಂದ ವೈದ್ಯರು ಕರ್ತವ್ಯ ಮಾಡಲು ಅನುವು ಮಾಡಿಕೊಡಬೇಕು. ಹಾಗಾಗಿ, ಹೊರರೋಗಿ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಆದರೆ, ತುರ್ತುಸೇವೆಗಳು ಮುಂದುವರಿಯಲಿವೆ’ ಎಂದು ತಿಳಿಸಿದರು.

ADVERTISEMENT

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

ಈ ಕುರಿತು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರಿಗೆ ಸಂಘದ ಸದಸ್ಯರು ಗುರುವಾರ ಮನವಿ ಪತ್ರ ಸಲ್ಲಿಸಿದರು.

ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ಮಹಿಳಾ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ಕನ್ನಡದಲ್ಲಿ ಮಾತನಾಡಿಲ್ಲ ಎಂಬ ಒಂದೇ ಕಾರಣಕ್ಕೆ ಆಸ್ಪತ್ರೆಯಲ್ಲಿ ದಾಂದಲೆ ಮಾಡಿರುವುದು ಸರಿಯಲ್ಲ. ಇವರ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ. ಇಂತಹ ವಾತಾವರಣದಿಂದ ವಿಶೇಷ ತಜ್ಞ ವೈದ್ಯರು ದೇಶ ತೊರೆಯುತ್ತಿದ್ದಾರೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.