
ಮೈಸೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕಲ್ಯಾಣ ಸಂಘ ಅಸ್ತಿತ್ವಕ್ಕೆ ಬಂದಿದೆ.
ಸಂಘದ ಉದ್ಘಾಟನೆ ಹಾಗೂ ನೌಕರರ ಸಮಾವೇಶ ಇಲ್ಲಿನ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು. ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ನೌಕರರು ಪಾಲ್ಗೊಂಡಿದ್ದರು.
ಸಂಘದ ಉದ್ಘಾಟನೆ ನೆರವೇರಿಸಿದ ಸಮಾಜಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾತನಾಡಿ, ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರಿಗೆ ಬಡ್ತಿ ಮೀಸಲಾತಿ ಕೊಡಿಸಲಾಗುವುದು. ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಕೆಗೆ ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದರು.
‘ಗ್ರಾಮ ಸಭೆಗಳಲ್ಲಿ ನಮ್ಮಜಾತಿ–ಪಕ್ಷದವನು ಎನ್ನುವ ರೀತಿಯಲ್ಲಿ ಚರ್ಚೆ, ಜಂಗೀಕುಸ್ತಿ ನಡೆಯುತ್ತದೆಯೇ ಹೊರತು ರಚನಾತ್ಮಕ ಚರ್ಚೆ ಆಗುತ್ತಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು. ‘ಗ್ರಾಮ ಪಂಚಾಯಿತಿಗಳಲ್ಲಿನ ಆಡಳಿತ ಪಾರದರ್ಶಕವಾಗಿ ನಡೆಯಬೇಕು. ತುಳಿತಕ್ಕೆ ಒಳಗಾದವರನ್ನು ಮೇಲೆತ್ತುವ ಕೆಲಸ ಆಗಬೇಕು’ ಎಂದು ಹೇಳಿದರು.
ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಎ.ಎರ್. ಕೃಷ್ಣಮೂರ್ತಿ, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ತ ಸಿದ್ದರಾಮಯ್ಯ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಸಂಘದ ರಾಜ್ಯಾಧ್ಯಕ್ಷ ಎಂ.ಸುರೇಶ್‌ಕುಮಾರ್ ಹಾಗೂ ಜಿಲ್ಲಾ ಅಧ್ಯಕ್ಷ ಪ್ರಕಾಶ ಸಿ. ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.