ADVERTISEMENT

ರಾಜವಂಶಸ್ಥರಿಗೆ ಸರ್ಕಾರದ ಆಹ್ವಾನ: ಆಮಂತ್ರಣ ‍ಪತ್ರಿಕೆ ನೀಡಿದ ಸಚಿವ ಮಹದೇವಪ್ಪ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 5:32 IST
Last Updated 15 ಸೆಪ್ಟೆಂಬರ್ 2025, 5:32 IST
<div class="paragraphs"><p>ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಭಾನುವಾರ ಆಹ್ವಾನ ನೀಡಿದರು.  </p></div>

ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಭಾನುವಾರ ಆಹ್ವಾನ ನೀಡಿದರು.

   

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಭಾನುವಾರ ಸರ್ಕಾರದಿಂದ ಅಧಿಕೃತವಾಗಿ ಆಹ್ವಾನ ನೀಡಲಾಯಿತು. 

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಅರಮನೆಯಲ್ಲಿರುವ ನಿವಾಸದಲ್ಲಿ ಪ್ರಮೋದಾದೇವಿ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ಹಾಗೂ ಆಮಂತ್ರಣ ‍ಪತ್ರಿಕೆ ನೀಡಿ ಆಹ್ವಾನಿಸಿದರು. ಸರ್ಕಾರದಿಂದ ಪ್ರತಿ ವರ್ಷದಂತೆ ಈ ಬಾರಿಯೂ ಗೌರವಧನದ ಚೆಕ್ ನೀಡಿದರು.

ADVERTISEMENT

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ‘ದಸರೆಗೆ ಸಹಕಾರ ನೀಡುವಂತೆ ಕೋರಿದ್ದು, ಅಗತ್ಯವಾಗಿ ನೀಡುವುದಾಗಿ ತಿಳಿಸಿದ್ದಾರೆ’ ಎಂದರು. 

‘ಜಿಲ್ಲಾಡಳಿತಕ್ಕೆ ದಸರಾ ಪ್ರಯುಕ್ತ ಕೆಲವು ಸೂಚನೆ ನೀಡಿದ್ದು, ಕಳೆದ ಬಾರಿ ಆಸನಗಳ ವ್ಯವಸ್ಥೆ ಹೆಚ್ಚಿಸುವಂತೆ ಸಲಹೆ ನೀಡಿದ್ದರು. ಅದರಂತೆ ವ್ಯವಸ್ಥೆ ಮಾಡಲಾಗಿತ್ತು. ಈ ಬಾರಿಯೂ ಸಲಹೆಗಳ ಅನುಸಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು. 

‘ಕಳೆದ ಬಾರಿ ಜಂಬೂಸವಾರಿ ವೇಳೆ ಅಂಬಾರಿ ಕಟ್ಟುವುದು ತಡವಾಗಿಲ್ಲ. ಬದಲಾಗಿ ಸಂವಹನದ ಕೊರತೆಯಿಂದಾಗಿ ಸ್ವಲ್ಪ ವಿಳಂಬವಾಯಿತು. ಬೇರೇನಿಲ್ಲ’ ಎಂದು ಪ್ರತಿಕ್ರಿಯಿಸಿದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್‌, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್‌, ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಯುಕೇಶ್ ಕುಮಾರ್, ಎಸ್‌ಪಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಡಿಸಿಪಿಗಳಾದ ಆರ್.ಎನ್.ಬಿಂದುಮಣಿ, ಕೆ.ಎಸ್.ಸುಂದರರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್‌.ಸುಬ್ರಹ್ಮಣ್ಯ ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.