ಮೈಸೂರು: ‘ಕೆಲಸಗಳನ್ನು ಮಾಡಿಕೊಡಲು ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನೆ) ಸಭೆಯಲ್ಲಿ ಅವರು ಮಾತನಾಡಿದರು.
‘ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ. ನೀವೆಲ್ಲರೂ ಜಿಲ್ಲಾ ಕೇಂದ್ರದಲ್ಲೇ ಏಕಿರಬೇಕು, ತಾಲ್ಲೂಕುಗಳಲ್ಲಿ ಇದ್ದುಕೊಂಡು ಜನರ ಸಮಸ್ಯೆ ಕೇಳಬೇಕೆಂದು ಸೂಚನೆ ನೀಡಿದ್ದೆ. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರಿಗೆ ಸೂಚಿಸಿದರು.
‘ಅಧಿಕಾರಿ ಮತ್ತು ಸಿಬ್ಬಂದಿ ಜನ ಸೇವೆಯ ಪ್ರಮಾಣಮಾಡಿ ಹುದ್ದೆ ಸ್ವೀಕರಿಸಿದ್ದೀರಿ; ಅದನ್ನು ಪಾಲಿಸಬೇಕು. ನಾವು (ಜನಪ್ರತಿನಿಧಿಗಳು) ಐದು ವರ್ಷಕ್ಕೊಮ್ಮೆ ಬರುವವರು, ಅಧಿಕಾರಿಗಳು ಶಾಶ್ವತವಾಗಿ ಇರುವವರು ಎನ್ನುವ ಭಾವನೆ ಬಿಟ್ಟು ಕೆಲಸ ಮಾಡಬೇಕು’ ಎಂದರು.
ಕುಸಿದ್ದಿದ್ದೇಕೆ?:
ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
‘ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆಗಾಗಿ ನಮಗೆ ಹತ್ತಿರದ ಕಾರ್ಯಕರ್ತರನ್ನೇ ಹಿಡ್ಕೊಂಡು ಬರ್ತೀರಿ. ಇದು ಕೆಟ್ಟ ನಡವಳಿಕೆ. ಇದರಿಂದ ಕಾರ್ಯಕರ್ತರಿಗೂ ಕೆಟ್ಟ ಹೆಸರು ಬರುತ್ತದೆ. ಸರ್ಕಾರಕ್ಕೂ ಕೆಟ್ಟ ಹೆಸರು ತರಲು ಮುಂದಾದರೆ ಸಹಿಸಲಾಗದು’ ಎಂದು ತಿಳಿಸಿದರು.
ಸಭೆಗೆ ಗೈರು ಹಾಜರಾದ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸೂಚಿಸಿದರು.
‘ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗದಿತ ಅವಧಿಯ ಒಳಗೆ ಕೆಲಸಗಳು ಪೂರ್ಣಗೊಳ್ಳಬೇಕು ಎಂಬ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ನೀಡಿದ್ದೆ. ಆದರೂ ಸಮಾಧಾನ ಎನಿಸುವಷ್ಟರ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ ಏಕೆ? ಎಂದು ಕೇಳಿದರು.
‘ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು’ ಎಂದು ನಿರ್ದೇಶನ ನೀಡಿದರು.
ಅಲ್ಲಿಗೇಕೆ ಬರುತ್ತಿದ್ದರು?:
‘ಮೈಸೂರಿನ ತುಂಬಾ ಮಂದಿ, ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ಬರುತ್ತಿದ್ದಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ಕಾಯುತ್ತಾ ಇರುತ್ತಾರೆ. ಇವರಲ್ಲಿ ವೈಯುಕ್ತಿಕ ಸಮಸ್ಯೆಗಾಗಿ ಬರುವವರು ಕಡಿಮೆ. ಕಂದಾಯ ಇಲಾಖೆಯ ಸಮಸ್ಯೆಗಳಿಗಾಗಿ ಬರುವವರೇ ಹೆಚ್ಚು. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಇಲ್ಲಿನ ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ, ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುತ್ತಿದ್ದರೇ?’ ಎಂದು ಪ್ರಶ್ನಿಸಿದರು.
‘ಜಿಪಂ ಸಿಇಒ ಮತ್ತು ಇತರ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್‌ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ನಾನು ಕೊಟ್ಟಿದ್ದ ಸೂಚನೆ ಪಾಲನೆ ಆಗುತ್ತಿಲ್ಲ. ಇನ್‌ಸ್ಪೆಕ್ಟರ್‌ಗಳು, ಪಿಡಿಒಗಳು, ವಿಎಗಳ ಮೇಲೆ ಈ ಬಗ್ಗೆ ಬಹಳಷ್ಟು ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿಯು ತಹಶೀಲ್ದಾರ್ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿದರೆ, ಕೆಲಸ ಕದಿಯುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಕ್ಕಿ ಬೀಳುತ್ತಾರೆ. ಇಲ್ಲಿಯವರೆಗೂ ಯಾರ ವಿರುದ್ಧವೂ ದೂರು ಬಂದಿಲ್ಲ. ವರದಿ ಬಂದಿಲ್ಲ ಏಕೆ’ ಎಂದು ಪ್ರಶ್ನಿಸಿದರು.
ಆಗಾಗ ಪರಿಶೀಲಿಸಬೇಕು:
‘ಹಾಸ್ಟೆಲ್‌ಗಳಲ್ಲಿ ಊಟದ ವ್ಯವಸ್ಥೆಯನ್ನು ಆಗಾಗ ಪರಿಶೀಲನೆ ನಡೆಸುತ್ತಿರಬೇಕು’ ಎಂದರು.
‘ನಿಮ್ಮ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಬೇಕು. ಎಲ್ಲವನ್ನೂ ಗಮನಿಸುತ್ತಿರುತ್ತೇನೆ’ ಎಂದು ನೂತನ ಡಿಸಿಪಿಐ ಉದಯಕುಮಾರ್ ಅವರಿಗೆ ಸೂಚಿಸಿದರು.
‘ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಜಿಲ್ಲೆಯ ಫಲಿತಾಂಶ ಉತ್ತಮಗೊಳ್ಳಬೇಕು. ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್ ಸಿದ್ಧಪಡಿಸಿ ಅನುಷ್ಠಾನಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.
ಕೋಪಗೊಂಡ ಸಿಎಂ:
‘ಮೈಸೂರು ಶಿಕ್ಷಣಕ್ಕೆ ಮೊದಲಿನಿಂದಲೂ ಅತ್ಯಂತ ಪ್ರಾಮುಖ್ಯತೆ ನೀಡಿದ್ದ ಸಂಸ್ಥಾನ. ಇಲ್ಲೇ ಶಿಕ್ಷಣ ಸೂಚ್ಯಂಕದಲ್ಲಿ ಕುಸಿದಿರುವುದು ಸರಿಯಲ್ಲ’ ಎಂದು ಕೋಪಗೊಂಡರು. ‘ಪರಿಸ್ಥಿತಿ ಸುಧಾರಿಸಬೇಕು’ ಎಂದು ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕರಾದ ಜಿ.ಟಿ. ದೇವೇಗೌಡ, ಕೆ.ಹರೀಶ್‌ಗೌಡ, ದರ್ಶನ್ ಧ್ರುವನಾರಾಯಣ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಡಿ.ರವಿಶಂಕರ್, ಟಿ.ಎಸ್. ಶ್ರೀವತ್ಸ, ಸಂಸದ ಸುನೀಲ್ ಬೋಸ್, ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್, ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.