ADVERTISEMENT

ಮೈಸೂರು: ಮುಖ್ಯಮಂತ್ರಿ ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ

ಸುತ್ತೂರು ಹೆಲಿಪ್ಯಾಡ್‌ಗೆ ನಾಳೆ ಆಗಮಿಸಲಿರುವ ಸಿದ್ದರಾಮಯ್ಯ; ಮತದಾರರಿಗೆ ಕೃತಜ್ಞತೆ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2023, 6:47 IST
Last Updated 9 ಜೂನ್ 2023, 6:47 IST
ಮೈಸೂರಿನ ಕಾಂಗ್ರೆಸ್‌ ಭವನದಲ್ಲಿ ಗುರುವಾರ ನಡೆದ ಸಭೆಯಲ್ಲಿ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌ ಮಾತನಾಡಿದರು –ಪ್ರಜಾವಾಣಿ ಚಿತ್ರ
ಮೈಸೂರಿನ ಕಾಂಗ್ರೆಸ್‌ ಭವನದಲ್ಲಿ ಗುರುವಾರ ನಡೆದ ಸಭೆಯಲ್ಲಿ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌ ಮಾತನಾಡಿದರು –ಪ್ರಜಾವಾಣಿ ಚಿತ್ರ   

ಮೈಸೂರು: ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಅಧಿಕಾರ ಸ್ವೀಕರಿಸಿದ ನಂತರ ತವರು ಜಿಲ್ಲೆ ಮೈಸೂರಿಗೆ ಇದೇ ಮೊದಲಿಗೆ ಅಂದರೆ ಜೂನ್‌ 10ರಂದು ಆಗಮಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ಪಕ್ಷದ ನಗರ ಹಾಗೂ ಗ್ರಾಮಾಂತರ ಜಿಲ್ಲಾ ಸಮಿತಿಯಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಸಮಿತಿಯ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ ಕುಮಾರ್, ‘ಜಿಲ್ಲೆಯ ಸುತ್ತೂರು ಹೊರವಲಯದ ಹೆಲಿಪ್ಯಾಡ್‌ಗೆ ಮುಖ್ಯಮಂತ್ರಿ ಬಂದಿಳಿಯಲಿದ್ದಾರೆ. ಅಲ್ಲಿಂದ ಗ್ರಾಮಕ್ಕೆ ಒಂದು ಕಿ.ಮೀ. ಅಂತರವಿದ್ದು, ತೆರೆದ ಜೀಪಿನಲ್ಲಿ ಮೆರವಣಿಗೆ ಮೂಲಕ ಸ್ವಾಗತಿಸಲಾಗುವುದು. 50 ಸಾವಿರ ಮಂದಿಯನ್ನು ಸೇರಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಹಕರಿಸಬೇಕು. ಕಲಾತಂಡಗಳನ್ನು ಕರೆತರಬೇಕು’ ಎಂದು ಕೋರಿದರು.

‘ಅಂದು ಬೆಳಿಗ್ಗೆ 11ಕ್ಕೆ ವರುಣ ಕ್ಷೇತ್ರದ ಬಿಳಿಗೆರೆ ಬೋರೆಯಲ್ಲಿ ಆಯೋಜಿಸಿರುವ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಮಧ್ಯಾಹ್ನ 3ಕ್ಕೆ ಸುತ್ತೂರು ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ತೆರಳಲಿದ್ದಾರೆ’ ಎಂದು ಮಾಹಿತಿ ನೀಡಿದರು.

ADVERTISEMENT

ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ ಮಾತನಾಡಿ, ‘ತಾಲ್ಲೂಕು ಕೇಂದ್ರಗಳಿಂದ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆ ತರಲಾಗುವುದು’ ಎಂದು ತಿಳಿಸಿದರು.

ಮುಖಂಡರಾದ ಕೆ.ಮರೀಗೌಡ, ಬನ್ನೂರು ಕೃಷ್ಣಪ್ಪ, ನಗರ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಲತಾ ಚಿಕ್ಕಣ್ಣ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಕ್ಷದ ನಗರ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ಕಾರ್ಯದರ್ಶಿ ಚಂದ್ರಮೌಳಿ, ಮುಖಂಡರಾದ ಪ್ರೊ.ರಾಮಪ್ಪ, ಮಂಜುಳಾ ಮಾನಸ, ಕೂರ್ಗಳ್ಳಿ ಮಹದೇವ್, ಚಿಕ್ಕಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.