ADVERTISEMENT

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ 4ರಂದು

ಮಕ್ಕಳಿಗೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 28 ಮೇ 2025, 16:06 IST
Last Updated 28 ಮೇ 2025, 16:06 IST
ನಾಲ್ವಡಿ ಕೃಷ್ಣರಾಜ ಒಡೆಯರ್‌
ನಾಲ್ವಡಿ ಕೃಷ್ಣರಾಜ ಒಡೆಯರ್‌   

ಮೈಸೂರು: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ರಾಜ್ಯ ಮಟ್ಟದ ‘ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ’ಯನ್ನು ಇಲ್ಲಿನ ವಿನೋಬಾ ರಸ್ತೆಯ ಕಲಾಮಂದಿರದಲ್ಲಿ ಜೂನ್ 4ರಂದು ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 8.30ಕ್ಕೆ ಅರಮನೆ ಆವರಣದಲ್ಲಿನ ಖಿಲ್ಲೆ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಲಿದ್ದು, ಕೆ.ಆರ್. ವೃತ್ತದ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ಕಲಾಮಂದಿರದವರೆಗೆ ಮೆರವಣಿಗೆ ನಡೆಯಲಿದೆ.

ವೇದಿಕೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಭಾಗವಹಿಸುವರು. ಶಾಸಕ ಕೆ.ಹರೀಶ್ ಗೌಡ ಅಧ್ಯಕ್ಷತೆ ವಹಿಸುವರು. ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಅನಿತಾ ಎಂ.ಎಸ್. ಉಪನ್ಯಾಸ ನೀಡುವರು.

ADVERTISEMENT

ರಾಜರ್ಷಿಯ ಸಾಕ್ಷ್ಯಚಿತ್ರ ಹಾಗೂ ಅವರ ಜೀವನ ಕುರಿತಾದ ಭಾವಚಿತ್ರಗಳ ಪ್ರದರ್ಶನವನ್ನು ಸುಚಿತ್ರ ಕಲಾ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 8.30ಕ್ಕೆ ‘ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜೀವನ ಮತ್ತು ಸಾಧನೆಗಳು’ ಕುರಿತು ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

6ರಿಂದ 13 ವರ್ಷ ಮತ್ತು 14ರಿಂದ 18 ವರ್ಷ ವಯಸ್ಸಿನವರಿಗೆ– ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಪ್ರತಿ ವಿಭಾಗದಲ್ಲಿ ತಲಾ ಮೂರು (ಪ್ರಥಮ, ದ್ವಿತೀಯ, ತೃತೀಯ) ಬಹುಮಾನ ನೀಡಲಾಗುತ್ತದೆ. ಅಂದೇ ಬೆಳಿಗ್ಗೆ 11.30ಕ್ಕೆ ನಡೆಯುವ ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿಪತ್ರ, ಪುಸ್ತಕಗಳು ಹಾಗೂ ನಗದು ಬಹುಮಾನ ಕೊಡಲಾಗುವುದು. 

ಭಾಗವಹಿಸಲು https://forms.gle/ SkMT6PYZbAt6yizv6 ಮೂಲಕ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ. 0821-2513225 ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.