ADVERTISEMENT

27ರಂದು ಬಾರುಕೋಲು ಚಳವಳಿ

ವಿವಿಧ ಬೇಡಿಕೆ ಈಡೇರಿಕೆಗೆ ರೈತ ಸಂಘ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2025, 2:28 IST
Last Updated 13 ನವೆಂಬರ್ 2025, 2:28 IST
ನಂಜನಗೂಡಿನ ಎಪಿಎಂಸಿ ಸಭಾಂಗಣದಲ್ಲಿ ಸೋಮವಾರ ನಡೆದ ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವಿದ್ಯಾಸಾಗರ್‌ ಮಾತನಾಡಿದರು
ನಂಜನಗೂಡಿನ ಎಪಿಎಂಸಿ ಸಭಾಂಗಣದಲ್ಲಿ ಸೋಮವಾರ ನಡೆದ ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವಿದ್ಯಾಸಾಗರ್‌ ಮಾತನಾಡಿದರು   

ನಂಜನಗೂಡು: ‘ಬಗರ್ ಹುಕುಂ ಸಾಗುವಳಿ ಚೀಟಿ ವಿತರಣೆ, ಸ್ಥಳೀಯರಿಗೆ ಉದ್ಯೋಗ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ (ಅ.27) ನಗರದಲ್ಲಿ ಬಾರೋಕೋಲು ಚಳವಳಿ ನಡೆಸಲಾಗುವುದು’ ಎಂದು ರೈತ ಸಂಘದ ರಾಜ್ಯ ಕಾರ್ಯಧ್ಯಕ್ಷ ಟಿ.ಆರ್.ವಿದ್ಯಾಸಾಗರ್ ತಿಳಿಸಿದರು.

ನಗರದ ಎಪಿಎಂಸಿ ಸಭಾಂಗಣದಲ್ಲಿ ಸೋಮವಾರ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಬಗರ್ ಹುಕುಂ ಸಾಗುವಳಿ ಚೀಟಿಯನ್ನು ನೀಡದೆ, ವಂಚಿಸಿ ಉಳ್ಳವರಿಗೆ ಸಾಗುವಳಿ ಚೀಟಿ ವಿತರಿಸುವ ಕೆಲಸ ನಡೆಯುತ್ತಿದೆ. ಕೆಲ ರೈತರಿಗೆ ಸಾಗುವಳಿ ಚೀಟಿ ವಿತರಿಸಿದ್ದರೂ ದುರಸ್ತಿ ಕೆಲಸ ಆಗಿಲ್ಲ, ಅಧಿಕಾರಿಗಳು ಸಬೂಬು ಹೇಳಿ ಕಾಲಹರಣ ಮಾಡುತ್ತಿದ್ದಾರೆ’ ಎಂದರು.

ADVERTISEMENT

‘ಈ ಬಗ್ಗೆ ಸಮಸ್ಯೆಯನ್ನು ಆಲಿಸಲು ತಹಶೀಲ್ದಾರ್ ರೈತರ ಕೈಗೆ ಸಿಗುತ್ತಿಲ್ಲ, ಸಮಸ್ಯೆ ಹೇಳಿಕೊಳ್ಳಲು ವಾರಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಗಳಲ್ಲಿ ಚರಂಡಿ ಸ್ವಚ್ಛತೆ ಇಲ್ಲದೆ ಗಬ್ಬು ನಾರುತ್ತಿವೆ, ಕನಿಷ್ಠ ವಿದ್ಯುತ್ ದೀಪ ಅಳವಡಿಸುವ ಕೆಲಸ ಮಾಡುತ್ತಿಲ್ಲ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಈ –ಸ್ವತ್ತು ನೀಡಲು ಲಂಚ ಕೇಳುತ್ತಿದ್ದಾರೆ’ ಎಂದು ಆರೋಪಿಸಿದರು.

‘ಕಾಡುಪ್ರಾಣಿ ಹಾವಳಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲಗೊಂಡಿದ್ದಾರೆ. ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ, ಉದ್ಯೋಗ ನೀಡುವಂತೆ, ಪ್ರತಿ ಕಬ್ಬಿಗೆ ₹5 ಸಾವಿರ ನಿಗದಿಪಡಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಾರುಕೋಲು ಚಳವಳಿಯನ್ನು ನಡೆಸಲಾಗುವುದು’ ಎಂದು ತಿಳಿಸಿದರು.

ಸಭೆಯಲ್ಲಿ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ್ ರಾವ್, ಮುಖಂಡರಾದ ಶಂಕರ್ ನಾಯ್ಕ, ಶ್ವೇತಾ, ಸವಿತಾ, ಮಹದೇವ ನಾಯಕ, ಸಿದ್ದು, ಪೈ.ಮಹದೇವ ನಾಯಕ, ದೊಡ್ಡಯ್ಯ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.