ADVERTISEMENT

ಮತದಾರರು ಕಡ್ಡಾಯವಾಗಿ ಹಕ್ಕು ಚಲಾಯಿಸಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವರಾಜ್

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 12:37 IST
Last Updated 25 ಜನವರಿ 2023, 12:37 IST
ಮೈಸೂರಿನಲ್ಲಿ ಜಿಲ್ಲಾಡಳಿತದಿಂದ ಬುಧವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವರಾಜ್ ಭೂತೆ ಇ–ಎಪಿಕ್‌ ಕಾರ್ಡ್‌ಗಳನ್ನು ವಿತರಿಸಿದರು/ ಪ್ರಜಾವಾಣಿ ಚಿತ್ರ
ಮೈಸೂರಿನಲ್ಲಿ ಜಿಲ್ಲಾಡಳಿತದಿಂದ ಬುಧವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವರಾಜ್ ಭೂತೆ ಇ–ಎಪಿಕ್‌ ಕಾರ್ಡ್‌ಗಳನ್ನು ವಿತರಿಸಿದರು/ ಪ್ರಜಾವಾಣಿ ಚಿತ್ರ   

ಮೈಸೂರು: ‘ಚುನಾವಣೆಗಳಲ್ಲಿ ಪ್ರತಿಯೊಬ್ಬ ಮತದಾರರೂ ಕಡ್ಡಾಯವಾಗಿ ಮತದಾನ ಮಾಡಿ ಜನಪ್ರತಿನಿಧಿಗಳ ಆಯ್ಕೆಯಲ್ಲಿ ಭಾಗವಹಿಸಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವರಾಜ್ ಭೂತೆ ತಿಳಿಸಿದರು.

ಕಲಾಮಂದಿರದಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘1950ರಲ್ಲಿ ಚುನಾವಣಾ ಆಯೋಗ ಸ್ಥಾಪನೆಯಾಯಿತು. ಮತದಾರರ ದಿನವನ್ನು 2011ರಿಂದ ಆಚರಿಸಲಾಗುತ್ತಿದೆ. ಇದರ ಮುಖ್ಯ ಉದ್ದೇಶ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವುದು ಹಾಗೂ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವುದೇ ಆಗಿದೆ. 18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು’ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ‘ಯುವ ಜನತೆಯನ್ನು ಮತದಾನದಲ್ಲಿ ಭಾಗವಹಿಸುವಂತೆ ಮಾಡುವುದು, ಶಾಂತಿಯುತ ಮತದಾನ ನಡೆಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ. ಮೈಸೂರು ಜಿಲ್ಲೆಯಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚಿನ ಯುವ ಮತದಾರರು ಇದ್ದಾರೆ. ಆದರೆ, 30ಸಾವಿರ ಮಂದಿಯಷ್ಟೇ ನೋಂದಣಿ ಮಾಡಿಸಿದ್ದಾರೆ. ವೋಟರ್ ಹೆಲ್ಪ್ ಲೈನ್ ಆ್ಯಪ್‌ ಅನ್ನು ಮೊಬೈಲ್ ಫೋನ್‌ನಲ್ಲಿ ಡೌನ್‌ಲೌಡ್‌ ಮಾಡಿಕೊಂಡು ನೋಂದಣಿ, ತಿದ್ದುಪಡಿ ಮಾಡಿಕೊಳ್ಳಬಹುದು’ ಎಂದು ಹೇಳಿದರು.

‘ಪ್ರಜ್ಞಾವಂತ ಮತದಾರರಿಂದ ಸದೃಢ ದೇಶವನ್ನು ನಿರ್ಮಾಣ ಮಾಡಲು ಸಾಧ್ಯ. ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ, ಮಾಹಿತಿ ಸರಿಯಾಗಿದೆಯೇ ಎಂಬುದನ್ನು ಅರ್ಹ ಮತದಾರರೆಲ್ಲರೂ ಪರೀಕ್ಷಿಸಿಕೊಳ್ಳಬೇಕು. ಆಸೆ–ಆಮಿಷಗಳಿಗೆ ಒಳಗಾಗದೆ ಹಕ್ಕು ಚಲಾಯಿಸಬೇಕು’ ಎಂದು ತಿಳಿಸಿದರು.

ಯುವ ಮತದಾರರಿಗೆ ಇ–ಎಪಿಕ್‌ ಕಾರ್ಡ್‌ಗಳನ್ನು ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್.ಪೂರ್ಣಿಮಾ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್‌ಒಗಳಿಗೆ, ಪ್ರಬಂಧ, ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿಪತ್ರಗಳನ್ನು ವಿತರಣೆ ಮಾಡಲಾಯಿತು.

ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಲೋಕನಾಥ್, ಮುಡಾ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್, ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಶಿವರಾಜ್, ಡಿಸಿಪಿ ಗೀತಾ, ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತೆ ರೂಪಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.