ADVERTISEMENT

ತ್ಯಾಜ್ಯ ನಿರ್ವಹಣೆ: ಸೂಕ್ತ ಕ್ರಮ ಅನುಸರಿಸಿ

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಅಧ್ಯಕ್ಷ ನ್ಯಾಯಮೂರ್ತಿ ಸುಭಾಷ್ ಬಿ.ಅಡಿ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 13:50 IST
Last Updated 27 ಫೆಬ್ರುವರಿ 2020, 13:50 IST
ಮೈಸೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳ ಘನ ತ್ಯಾಜ್ಯ ನಿರ್ವಹಣೆ ಅನುಷ್ಠಾನ ಕುರಿತಂತೆ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಅಧ್ಯಕ್ಷ ನ್ಯಾಯಮೂರ್ತಿ ಸುಭಾಷ್ ಬಿ.ಅಡಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು
ಮೈಸೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳ ಘನ ತ್ಯಾಜ್ಯ ನಿರ್ವಹಣೆ ಅನುಷ್ಠಾನ ಕುರಿತಂತೆ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಅಧ್ಯಕ್ಷ ನ್ಯಾಯಮೂರ್ತಿ ಸುಭಾಷ್ ಬಿ.ಅಡಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು   

ಮೈಸೂರು: ‘ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಕೆಲಸ ಸೂಕ್ತವಾಗಿ ನಡೆಯಬೇಕು. ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಸದಾ ಕಾರ್ಯೋನ್ಮುಖರಾಗಬೇಕು’ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ್ ಬಿ.ಅಡಿ ಸೂಚಿಸಿದರು.

ಮೈಸೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳ ಘನ ತ್ಯಾಜ್ಯ ನಿರ್ವಹಣೆ ಅನುಷ್ಠಾನ ಕುರಿತಂತೆ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು 2016ರಲ್ಲೇ ಸೂಚಿಸಲಾಗಿತ್ತು. ಆದರೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳು ಅನುಷ್ಠಾನಕ್ಕೆ ತಂದಿಲ್ಲ. ಅಧಿಕಾರಿಗಳು ಕೂಡಲೇ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

‘ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಕಡಿವಾಣ ಹಾಕಬೇಕಾದ ಅನಿವಾರ್ಯತೆಯಿದೆ. ಸರ್ಕಾರದ ಪರಿಸರ ಕಾಯ್ದೆಯನ್ವಯ ಅಧಿಕಾರ ಚಲಾಯಿಸಿ, ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ ಹಾಗೂ ಮಾರಾಟ ನಿಷೇಧಿಸಲು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಮರ್ಪಕವಾಗಿ ಕಠಿಣ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ನಿತ್ಯದ ಬಳಕೆಯ ವಸ್ತುವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ತ್ಯಾಜ್ಯ ವಿಂಗಡಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಅಳವಡಿಸಿಕೊಂಡು ಹಸಿ ಕಸ, ಒಣ ಕಸಗಳನ್ನು ಕಡ್ಡಾಯವಾಗಿ ಬೇರ್ಪಡಿಸಬೇಕು. ಈ ರೀತಿಯಲ್ಲಿ ಕಸವನ್ನು ಸಂಗ್ರಹಿಸಿ ಘಟಕಗಳಲ್ಲಿ ವಿಲೇವಾರಿ ಮಾಡಬೇಕು. ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿಯಿಂದಾಗಿ ಅಂತರ್ಜಲ ಮಲೀನಗೊಳ್ಳುತ್ತದೆ. ಅಲ್ಲದೆ ತ್ಯಾಜ್ಯ ರಾಶಿಗೆ ಬೆಂಕಿ ಹಾಕುವುದರಿಂದ ವಾತಾವರಣಕ್ಕೆ ವಿಷ ಅನಿಲ ಸೇರುತ್ತದೆ. ಈ ಬಗ್ಗೆ ಆಯಾ ಸ್ಥಳೀಯ ಸಂಸ್ಥೆಗಳು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಜಿಲ್ಲಾ ಪಂಚಾಯತಿ ಸಿಇಒ ಕೆ.ಜ್ಯೋತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಎನ್.ಮುನಿರಾಜು, ಡಿಡಿಪಿಐ ಡಾ.ಪಾಂಡುರಂಗ, ನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.