ಹುಣಸೂರು: ‘ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರು ಈಗಾಗಲೇ ಫಾರಂ ನಂ. 50–57ರಲ್ಲಿ ಅರ್ಜಿ ಸಲ್ಲಿಸಿದ್ದರೂ ಅರ್ಜಿ ವಿಲೇವಾರಿ ಮಾಡಲು ಕಂದಾಯ ಇಲಾಖೆ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಸೂರ್ಯ ದೂರಿದರು.
ನಗರದ ತಹಶೀಲ್ದಾರ್ ಕಚೇರಿ ಎದುರು ರೈತರು ಬಗರ್ ಹುಕುಂ ಸಾಗುವಳಿ ಪತ್ರಕ್ಕೆ ಒತ್ತಾಯಿಸಿ ಶುಕ್ರವಾರ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.
‘ಕಳೆದ 50 ವರ್ಷಗಳಿಂದ ಗೋಮಾಳ, ಗುಂಡು ತೋಪು, ಅರಣ್ಯ ಭೂಮಿಗಳಲ್ಲಿ ಬಡ ರೈತರು ಸಾಗುವಳಿ ನಡೆಸಿ ಬದುಕು ಕಟ್ಟಿಕೊಂಡಿದ್ದಾರೆ. ಈ ಕುಟುಂಬಗಳಿಗೆ ಸರ್ಕಾರ ಫಾರಂ 50–57ರಲ್ಲಿ ಅರ್ಜಿ ಸಲ್ಲಿಸಿ ಭೂಮಿಹಕ್ಕು ಹೊಂದುವ ಅವಕಾಶ ಕಲ್ಪಿಸಿದ್ದು, ಫಲಾನುಭವಿಗಳು ಅರ್ಜಿ ಸಲ್ಲಿಸಿ ವರ್ಷಗಳು ಉರುಳಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದರು.
‘ಸರ್ಕಾರಿ ಭೂಮಿಯು ಬಲಾಢ್ಯರ ಕೈವಶವಾಗುತ್ತಿದೆ. ಬಡ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. 100 ಜಾನುವಾರುಗಳಿಗೆ 25 ಎಕರೆ ಗೋಮಾಳ ಅಗತ್ಯ ಎಂದು ಸರ್ಕಾರದ ವರದಿ ಹೇಳುತ್ತದೆ. ಸರ್ಕಾರ ಜಾನುವಾರುಗಳ ಸಮೀಕ್ಷೆ ನಡೆಸಿ ಅಗತ್ಯಕ್ಕೆ ತಕ್ಕಷ್ಟು ಭೂಮಿಯನ್ನು ಗೋಮಾಳಕ್ಕೆ ಕಾದಿಟ್ಟು ಉಳಿಕೆ ಭೂಮಿಯನ್ನು ಕೃಷಿ ಚಟುವಟಿಕೆಗೆ ಸಾಗುವಳಿ ನೀಡಬೇಕು’ ಎಂದು ಆಗ್ರಹಿಸಿದರು.
‘ಬಡ ಸಾಗುವಳಿದಾರರಿಗೆ ಹಕ್ಕುಪತ್ರ ದೊರೆಯುವಂತೆ ಅರಣ್ಯ ಹಕ್ಕು ಮಾನ್ಯತಾ ಕಾಯ್ದೆಗೆ ತಿದ್ದುಪಡಿ ತರಬೇಕು. ಅರಣ್ಯದಂಚಿನ ಸಾಗುವಳಿ ಭೂಮಿ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ಜಾರಿಗೊಳಿಸುವುದನ್ನು ತಡೆಯಬೇಕು’ ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಚಿಕ್ಕಣ್ಣೇಗೌಡ, ಚಂದ್ರಶೇಖರ್, ಪುಟ್ಟರಾಜು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.