ADVERTISEMENT

ಆನ್‌ಲೈನ್‌ ವಂಚನೆ | ಎಚ್ಚರ ಅಗತ್ಯ: ಕೆ.ಎಂ. ಗಾಯತ್ರಿ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2025, 14:07 IST
Last Updated 11 ಫೆಬ್ರುವರಿ 2025, 14:07 IST
ಸುರಕ್ಷಿತ ಅಂತರ್ಜಾಲ ದಿನಾಚರಣೆ ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ಕೆ.ಎಂ. ಗಾಯತ್ರಿ ಮಾತನಾಡಿದರು
ಸುರಕ್ಷಿತ ಅಂತರ್ಜಾಲ ದಿನಾಚರಣೆ ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ಕೆ.ಎಂ. ಗಾಯತ್ರಿ ಮಾತನಾಡಿದರು   

ಮೈಸೂರು: ‘ದೈನಂದಿನ ಜೀವನದಲ್ಲಿ ತಂತ್ರಜ್ಞಾನ ಹಾಸುಹೊಕ್ಕಾಗಿದ್ದು, ಅದರ ಪ್ರಯೋಜನ ಹಾಗೂ ದುಷ್ಪರಿಣಾಮಗಳ ಅರಿವಿನ ಅಗತ್ಯವಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯತ್ರಿ ಹೇಳಿದರು.

ಮಾಹಿತಿ ತಂತ್ರಜ್ಞಾನ ಇಲಾಖೆ ಹಾಗೂ ಜಿಲ್ಲಾ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಜಿ.ಪಂ. ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಮಂಗಳವಾರ ‘ಸುರಕ್ಷಿತ ಅಂತರ್ಜಾಲ ದಿನಾಚರಣೆ’ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ವಂಚಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಯಾವುದೇ ಆಮಿಷಗಳಿಗೆ ಒಳಗಾಗದೇ ಅಂತರ್ಜಾಲದ ಉಪಯೋಗಗಳ ಬಗ್ಗೆ ಹೆಚ್ಚಿನ ಅರಿವು ಬೆಳೆಸಿಕೊಳ್ಳಬೇಕಿದೆ’ ಎಂದು ಆಶಿಸಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು, ‘ದೈನಂದಿನ ಕೆಲಸ ಕಾರ್ಯಗಳಿಗೆ ಅಗತ್ಯವಿರುವ ತಂತ್ರಜ್ಞಾನದ ಅರಿವು, ಮೋಸ ಹೋಗದಂತೆ ಸೈಬರ್ ಜಾಗೃತಿಗಳನ್ನು ಅಳವಡಿಸಿಕೊಳ್ಳಬೇಕು. ಕಚೇರಿಗಳಲ್ಲಿ ನಿಮ್ಮ ವೈಯಕ್ತಿಕ ಲಾಗಿನ್‌ಗಳ ಬಗ್ಗೆ ಅರಿವಿನ ಜೊತೆಗೆ ಇತರರಿಗೆ ಲಾಗಿನ್‌ಗಳನ್ನು ಹಂಚಿಕೆ ಮಾಡದಂತೆ ಎಚ್ಚರಿಕೆ ವಹಿಸಿ’ ಎಂದು ಸಲಹೆ ನೀಡಿದರು.

ಕುವೆಂಪುನಗರದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶಿಲ್ಪಾ ಆನ್‌ಲೈನ್‌ ವಂಚನೆಯ ವಿಧಾನಗಳ ಕುರಿತು ಮಾಹಿತಿ ನೀಡಿದರು.

ಜಿ.ಪಂ. ಉಪಕಾರ್ಯದರ್ಶಿ ಸವಿತಾ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಜಿಲ್ಲಾ ಸೂಚನಾ ವಿಜ್ಞಾನ ಅಧಿಕಾರಿ ಸುದರ್ಶನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.